Rain Alert | ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ

Public TV
2 Min Read

– ಚಿಕ್ಕಮಗಳೂರಿನ 5 ತಾಲೂಕುಗಳಲ್ಲಿ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಕೊಡಗು/ಚಿಕ್ಕಮಗಳೂರು: ರಾಜ್ಯದಲ್ಲಿ ಆರಿದ್ರಾ ಮಳೆ (Rain) ಅಬ್ಬರ ಜೋರಾಗಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ಶುಕ್ರವಾರವೂ (ಜೂ.27) ರಜೆ ಘೋಷಣೆ ಮಾಡಲಾಗಿದೆ.

ಕೊಡಗು:
ಕೊಡಗು (Kodagu) ಜಿಲ್ಲೆಯಲ್ಲಿ ಧಾರಕಾರ ಮಳೆ ಮುಂದುವರೆದಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಶುಕ್ರವಾರ (ಜೂನ್ 27 ರಂದು) ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ವೆಂಕಟ ರಾಜ ಅದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: 1 ಲಕ್ಷ ಕ್ಯೂಸೆಕ್ ದಾಟಿದ ಕೃಷ್ಣೆಯ ಒಳಹರಿವು – ನದಿ ತೀರದಲ್ಲಿ ಪ್ರವಾಹದ ಆತಂಕ

ಚಿಕ್ಕಮಗಳೂರು:
ಮಲೆನಾಡಲ್ಲಿ ಭಾರೀ ಗಾಳಿ-ಮಳೆ ಹಿನ್ನೆಲೆ ಚಿಕ್ಕಮಗಳೂರಿನ 5 ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ | 24 ಗಂಟೆಯಲ್ಲಿ 5 ಕಡೆ ಮೇಘಸ್ಫೋಟ – ಸಾವಿನ ಸಂಖ್ಯೆ ಐದಕ್ಕೆ ಏರಿಕೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಭೀತಿ
ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯಕ್ಕೆ 45 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರ್ತಿದೆ. ಕೆಆರ್‌ಎಸ್ ಭರ್ತಿಗೆ ಕೇವಲ ನಾಲ್ಕೇ ಅಡಿ ಬಾಕಿ ಇದೆ. ಜಲಾಶಯದಿಂದ ಕಾವೇರಿ ನದಿಗೆ ನೀರನ್ನು ಬಿಡಲಾಗ್ತಿದೆ. ಮೈಸೂರಿನ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲೂ ಏರಿಕೆಯಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಭಾಗದಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಎನ್‌ಕೌಂಟರ್ – ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

ನಾಪೋಕ್ಲು-ಮೂರ್ನಾಡು ಸಂಪರ್ಕ ರಸ್ತೆ ಸಂಪರ್ಕ ಕಡಿತವಾಗಿದೆ. ಹಾಸನದ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಗುಡ್ಡ ಕುಸಿದು ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇತ್ತ ಹೇಮಾವತಿ ನದಿಗೂ ಅಪಾರ ನೀರು ಹರಿದುಬಂದಿದೆ. ಇನ್ನು ಮಹಾರಾಷ್ಟ್ರದ ಪಶ್ಚಿಮ ಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಶುರುವಾಗಿದೆ.. ಹತ್ತಾರು ಸೇತುವೆಗಳು ಮುಳುಗಡೆಯಾಗಿವೆ.

ದೂದ್‌ಗಂಗಾ, ವೇದಗಂಗಾ, ಹಿರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುತ್ತಿನಗದ್ದೆ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಮನೆ ಪಕ್ಕದಲ್ಲೇ ಭೂ ಕುಸಿತವಾಗುತ್ತಿದ್ದು ಜನ ಆತಂಕಕ್ಕೀಡಾಗಿದ್ದಾರೆ. ಮೂಡಿಗೆರೆ ತಾಲೂಕಿನ ಹೆಸಗೋಡುವಿನಲ್ಲಿ ಕಾಫಿತೋಟ ಜಲಾವೃತವಾಗಿದೆ. ಹಾವೇರಿ ಜಿಲ್ಲೆಯಲ್ಲಿ ವರದಾ ನದಿ ತುಂಬಿ ಹರಿಯುತ್ತಿದ್ದು ನದಿ ದಾಟಲು ಹೋಗಿ ಸಿಲುಕಿದ್ದ ಇಬ್ಬರು ಯುವಕರನ್ನು ರಕ್ಷಿಸಲಾಗಿದೆ.

Share This Article