ಚಿದಂಬರಂ ಐದು ದಿನ ಸಿಬಿಐ ಕಸ್ಟಡಿಗೆ

Public TV
2 Min Read

ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಅವ್ಯವಹಾರ ಹಗರಣ ಸಂಬಂಧ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಸಿಬಿಐ ಅಧಿಕಾರಿಗಳು ಬುಧವಾರ ರಾತ್ರಿ ಪಿ.ಚಿದಂಬರಂ ಅವರನ್ನು ಬಂಧಿಸಿದ್ದರು. ರಾತ್ರಿ ಸಿಬಿಐ ಕೇಂದ್ರ ಕಚೇರಿಯಲ್ಲಿ ಇರಿಸಿಕೊಂಡಿದ್ದ ಅಧಿಕಾರಿಗಳು ಇಂದು ಕೋರ್ಟ್ ಗೆ ಹಾಜರು ಪಡಿಸಿದ್ದರು. ಪ್ರರಕಣದ ಕುರಿತು ವಿಚಾರಣೆ ನಡೆದಿದ ಕೋರ್ಟ್, ಆಗಸ್ಟ್ 22ರಿಂದ 26ರ ವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.

ಸಿಬಿಐ ಪರ ವಾದ ಮಂಡಿಸಿದ ಸಾಲಿಸಿಟರ್​ ಜನರಲ್​ ತುಶಾರ್​ ಮೆಹ್ತಾ ಅವರು, ಮೌನ ಎಂಬುದು ಸಂವಿಧಾನಿಕ ಹಕ್ಕು. ಇದರ ಬಗ್ಗೆ ನನಗೆ ಯಾವುದೇ ತಕರಾರು ಇಲ್ಲ. ಆದರೆ ಐಎನ್‍ಎಕ್ಸ್ ಮೀಡಿಯಾ ಅವ್ಯವಹಾರ ಹಗರಣ ಕುರಿತು ಪಿ.ಚಿದಂಬರಂ ಅವರು ತನಿಖೆಗೆ ಸಹಕರಿಸುತ್ತಿಲ್ಲ.  ಅವರು ಪ್ರಶ್ನೆಗಳಿಂದ ಪಲಾಯನ ಮಾಡುತ್ತಿದ್ದಾರೆ ಎಂದು ಕೋರ್ಟ್​ ಮುಂದೆ ವಾದ ಮಂಡಿಸಿದರು.

ಮಾಜಿ ಸಚಿವ ಪಿ.ಚಿದಂಬರಂ ಅವರ ಪರ ಹಿರಿಯ ವಕೀಲ ಕಪಿಲ್​ ಸಿಬಲ್​  ಅವರು ವಾದ ಮಂಡಿಸಿದರು. ಮಾಜಿ ಸಚಿವರ ಜೊತೆಗೆ ಅಭಿಷೇಕ್​ ಮನು ಸಿಂಗ್ವಿ, ಅವರ ಪತ್ನಿ ನಳಿನಿ ಮತ್ತು ಸಹ ಆರೋಪಿ ಮಗ ಕಾರ್ತಿ ಚಿದಂಬರಂ ಕೂಡ ನ್ಯಾಯಾಲಯದಲ್ಲಿ ಹಾಜರಿದ್ದರು. ವಾದ ಪ್ರತಿವಾದವನ್ನು ಆಲಿಸಿದ ಕೋರ್ಟ್  ಪಿ.ಚಿದಂಬರಂ ಅವರನ್ನು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಮಾಜಿ ಸಚಿವರು ಸಲ್ಲಿಸಿದ್ದ ನೀರಿಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್ ಮಂಗಳವಾರ ವಜಾಗೊಳಿಸಿದ ಬಳಿಕ ಪಿ.ಚಿದಂಬರಂ ಅವರು ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಆದರೆ 24 ಗಂಟೆ ಬಳಿಕ (ಬುಧವಾರ) ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಪ್ರತ್ಯಕ್ಷರಾಗಿ ಸುದ್ದಿಗೋಷ್ಠಿ ನಡೆಸಿದ್ದ ಅವರು ಆ ಬಳಿಕ ತಮ್ಮ ನಿವಾಸಕ್ಕೆ ತೆರಳಿದ್ದರು.

ಮಾಜಿ ಸಚಿವರು ನಿವಾಸಕ್ಕೆ ತೆರಳಿದ ಮಾಹಿತಿ ಲಭಿಸುತ್ತಿದಂತೆ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ಮನೆ ಆಗಮಿಸಿದ್ದರು. ಆದರೆ ಈ ಸಂದರ್ಭದಲ್ಲಿ ಗೇಟ್ ಹಾಕಿದ್ದರಿಂದ ಅಧಿಕಾರಿಗಳು ನಿವಾಸದ ಎದುರಿನ ಗೇಟ್ ಹಾಗೂ ಕಾಂಪೌಡ್ ಜಿಗಿದು ಪ್ರವೇಶಿಸಿದ್ದರು. ಇಡಿ ಹಾಗೂ ಸಿಬಿಐ ಅಧಿಕಾರಿಗಳು ನಿವಾಸ ಪ್ರವೇಶ ಮಾಡುತ್ತಿದಂತೆ ಸ್ಥಳದಲ್ಲಿ ಹೈಡ್ರಾಮಾ ಸೃಷ್ಟಿಯಾಗಿತ್ತು. ಈ ವೇಳೆ ಪೊಲೀಸರು ಕೂಡ ನಿವಾಸ ಎದುರು ಬೀಡು ಬಿಟ್ಟಿದ್ದರು. ಇಡಿ ಅಧಿಕಾರಿಗಳು ಚಿದಂಬರಂ ಅವರನ್ನು ಮನೆಯಲ್ಲಿಯೇ ವಿಚಾರಣೆಗೆ ಒಳಪಡಿಸಿದ್ದರು. ಆ ಬಳಿಕ ಮಾಜಿ ಸಚಿವರನ್ನು ಬಂಧಿಸಿದ ಅಧಿಕಾರಿಗಳು ಕಾರಿನಲ್ಲಿ ಕರೆದುಕೊಂಡ ಹೋಗಿದ್ದರು.

ಏನಿದು ಪ್ರಕರಣ?
ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿ (ಎಫ್‍ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಂದಾಯ ಸಚಿವಾಲಯ ವಿಚಾರಣೆಗೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಮಧ್ಯಸ್ಥಿಕೆ ವಹಿಸಿ, ತಂದೆಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯನ್ನು ತಪ್ಪಿಸಲು ತಮ್ಮ ಕಂಪನಿಯ ಮೂಲಕ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *