ಕನ್ನಡಿಗರಲ್ಲಿ ಕ್ಷಮೆಯಾಚಿಸಿ: ಸೋನು ನಿಗಮ್ ವಿವಾದಾತ್ಮಕ ಹೇಳಿಕೆಗೆ ಕನ್ನಡ ನಿರ್ಮಾಪಕನ ಆಕ್ರೋಶ

Public TV
2 Min Read

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯಿತು ಎಂದ ಸೋನು ನಿಗಮ್ (Sonu Nigam) ಹೇಳಿಕೆಗೆ ಕನ್ನಡ ನಿರ್ಮಾಪಕ ಕಾರ್ತಿಕ್ ಗೌಡ (Karthik Gowda) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಯಕ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಕನ್ನಡಿಗರಲ್ಲಿ ಕ್ಷಮೆಯಾಚಿಸಬೇಕು ಎಂದು ನಿರ್ಮಾಪಕ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಕನ್ನಡ.. ಕನ್ನಡ ಇದಕ್ಕೇನೇ ಭಯೋತ್ಪಾದಕ ದಾಳಿ ನಡೆದಿದ್ದು – ವಿವಾದ ಮೈಮೇಲೆಳೆದುಕೊಂಡ ಸೋನು ನಿಗಮ್

ಭಯೋತ್ಪಾದಕ ಕೃತ್ಯವನ್ನು ಕನ್ನಡ ಹಾಡನ್ನು ಹಾಡಬೇಕೆಂಬ ವಿನಂತಿಗೆ ತಳುಕು ಹಾಕುವುದು ಮೂರ್ಖತನವಲ್ಲದೆ ಬೇರೇನೂ ಅಲ್ಲ. ಅವರ ಹಿಂದಿನ ಎಲ್ಲಾ ಕಾರ್ಯಕ್ರಮಗಳಲ್ಲಿ, ಕನ್ನಡ ಹಾಡುಗಳನ್ನು ಹಾಡಿದ್ದಕ್ಕಾಗಿ ಕನ್ನಡಿಗರು ಇತರರಿಗಿಂತ ಹೆಚ್ಚಿನ ಪ್ರೀತಿಯನ್ನ ತೋರಿಸಿದ್ದಾರೆ. ಈಗ ಮೂರ್ಖ ಹೇಳಿಕೆಯನ್ನು ಅವರು ನೀಡಿದ್ದಾರೆ. ಇದಕ್ಕಾಗಿ ಅವರು ಕನ್ನಡಿಗರಲ್ಲಿ ಕ್ಷಮೆಯಾಚಿಸಬೇಕು ಎಂದು ಕೆಆರ್‌ಜಿ ನಿರ್ಮಾಣ ಸಂಸ್ಥೆಯ ರೂವಾರಿ ನಿರ್ಮಾಪಕ ಕಾರ್ತಿಕ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಜ್ಯೋತಿ ರೈ ನಟನೆಯ ‘ಕಿಲ್ಲರ್’ ಚಿತ್ರದ ಟೀಸರ್ ರಿಲೀಸ್

ನಿನ್ನೆ (ಮೇ.1) ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದನು. ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿಕೊಂಡರು.

ನನ್ನ ವೃತ್ತಿಜೀವನದಲ್ಲಿ ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆ ಪೈಕಿ ನಾನು ಹಾಡಿದ ಅತ್ಯುತ್ತಮ ಹಾಡುಗಳು ಕನ್ನಡದಲ್ಲಿವೆ. ನಾನು ಕರ್ನಾಟಕಕ್ಕೆ ಬಂದಾಗಲೆಲ್ಲಾ ತುಂಬಾ ಪ್ರೀತಿ, ಗೌರವದಿಂದ ಬರುತ್ತೇನೆ. ನೀವೆಲ್ಲ ನನ್ನನ್ನು ನಿಮ್ಮ ಕುಟುಂಬದವರಂತೆ ನೋಡಿಕೊಂಡಿದ್ದೀರಿ. ಪ್ರತಿ ಬಾರಿ ನಾನು ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆ ಹುಡುಗನ ವಯಸ್ಸಿಗಿಂತ ಮೊದಲಿನಿಂದಲೂ ನಾನು ಕನ್ನಡ ಹಾಡು ಹಾಡುತ್ತಿದ್ದೇನೆ. ಆದರೆ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಆ ಹುಡುಗ ಹೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡರು.

ಸೋನು ನಿಗಮ್ ಮಾತಿಗೆ ಕನ್ನಡಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಕನ್ನಡ ಹಾಡುವಂತೆ ಹೇಳಿದ್ದಕ್ಕೂ, ಭಯೋತ್ಪಾದಕರ ದಾಳಿಗೂ ಏನು ಸಂಬಂಧ? ಎಂದು ಆಕ್ರೋಶ ಹೊರಹಾಕಿದ್ದಾರೆ. ಸೋನು ನಿಗಮ್‌ರನ್ನು ಕನ್ನಡ ಚಿತ್ರೋದ್ಯಮದಿಂದ ದೂರ ಇಡಿ ಹಾಗೂ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Share This Article