ಬೆಂಗಳೂರು: ಆರ್‌ಸಿಬಿ (RCB) ಅಭಿಮಾನಿಗಳಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಅಂತರರಾಷ್ಟ್ರೀಯ ಮತ್ತು ಐಪಿಎಲ್ (IPL) ಪಂದ್ಯಗಳನ್ನು ನಡೆಸಲು ರಾಜ್ಯ ಗೃಹ ಇಲಾಖೆ ಗ್ರೀನ್ ಸಿಗ್ನಲ್ ಕೊಟ್ಟಿದೆ.
ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದ ನಿರ್ದಿಷ್ಟ ನಿಯಮಗಳು ಮತ್ತು ಷರತ್ತುಗಳ ಅನುಸರಣೆಗೆ ಸೂಚಿಸಿ ಒಪ್ಪಿಗೆ ನೀಡಿದೆ. ಇದನ್ನೂ ಓದಿ: ಚಿನ್ನಸ್ವಾಮಿಗೆ 4 ಕೋಟಿ ವೆಚ್ಚದಲ್ಲಿ ಆರ್‌ಸಿಬಿಯಿಂದ 350 AI ಕ್ಯಾಮೆರಾ – ಬೆಂಗಳೂರಿನಲ್ಲೇ ಪಂದ್ಯ?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಕ್ರಿಕೆಟ್ ಆಯೋಜನೆ ಮಾಡುವ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಕರ್ನಾಟಕ ಸರ್ಕಾರ ಮತ್ತು ಆರ್‌ಸಿಬಿ ಮ್ಯಾನ್ಮೆಜ್‌ಮೆಂಟ್ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಿತ್ತು.
ಮಾತುಕತೆ ಸಂದರ್ಭದಲ್ಲಿ ಸರ್ಕಾರದ ಅಧಿಕಾರಿಗಳು ಜನಸಂದಣಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದರು. ಅದರಂತೆ ಈಗ ಕ್ರಿಕೆಟ್ ಮೈದಾನದ ಸುತ್ತಲು ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ಸುಮಾರು 300 ರಿಂದ 350 ಎಐ ಕ್ಯಾಮೆರಾ ಅಳವಡಿಸುವ ಪ್ರಸ್ತಾಪವನ್ನು ಕೆಎಸ್‌ಸಿಎಗೆ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪಂದ್ಯಗಳನ್ನು ನಡೆಸಲು ಅನುಮತಿ ಸಿಕ್ಕಿದೆ. ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್? – ಮಾರ್ಗಸೂಚಿಗಳ ಚರ್ಚೆ ಬಳಿಕ ನಿರ್ಧಾರ: ಕೆಎಸ್‌ಸಿಎ
ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜಿಸುವ ಸಂಬಂಧ ನ್ಯಾ. ಮೈಕಲ್ ಡಿ ಕುನ್ಹಾ ವರದಿಯಲ್ಲಿ ಉಲ್ಲೇಖಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಈಗ ಕೆಎಸ್‌ಸಿಎ ಈಗ ಮುಂದಾಗಿದೆ. ಅಂಬುಲೆನ್ಸ್ ಓಡಾಟಕ್ಕೆ ಜಾಗ, ಪಾರ್ಕಿಂಗ್ ವ್ಯವಸ್ಥೆ, ತುರ್ತು ನಿರ್ಗಮನ, ಅಗಲವಾದ ಗೇಟ್‌ಗಳು, ಮಹಿಳೆಯರಿಗೆ ಪ್ರತ್ಯೇಕ ಮಾರ್ಗ ಸೇರಿ ಎಲ್ಲಾ ಮಾರ್ಗಸೂಚಿಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ.
ಈ ಬಾರಿಯ ಐಪಿಎಲ್ ಮಾರ್ಚ್ 21 ರಂದು ಪ್ರಾರಂಭವಾಗುವ ಸಾಧ್ಯತೆಯಿದೆ. ಫೆಬ್ರವರಿ ಕೊನೆಯಲ್ಲಿ ಐಪಿಎಲ್ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.


