ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

Public TV
2 Min Read

– ಜನವಿರೋಧಿ ರಾಜ್ಯ ಸರ್ಕಾರಕ್ಕೆ ಮುಖಭಂಗ, ಸಾಮಾನ್ಯ ಜನತೆಗೆ ಸಂದ ಜಯ: ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳನ್ನು (Jan Aushadhi Center) ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ (High Court) ತಾತ್ಕಾಲಿಕ ತಡೆ ನೀಡಿದೆ. ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ & ಇತರರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿರುವ ಕೋರ್ಟ್, ಮುಂದಿನ ವಿಚಾರಣೆವರೆಗೂ ಕೇಂದ್ರಗಳನ್ನು ಸ್ಥಗಿತಗೊಳಿಸದಂತೆ ಮಧ್ಯಂತರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಆದೇಶ ಹೊರಡಿಸಿತ್ತು. ಈ ನಿರ್ಧಾರವು ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಒದಗಿಸುತ್ತಿದ್ದ ಈ ಕೇಂದ್ರಗಳು ಸ್ಥಗಿತಗೊಂಡರೆ, ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಲಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

ಸರ್ಕಾರದ ಆದೇಶವನ್ನು ಪ್ರಶ್ನಿಸಿ, ಸಂಸದ ತೇಜಸ್ವಿ ಸೂರ್ಯ ಮತ್ತು ಹಲವು ಜನೌಷಧಿ ಕೇಂದ್ರಗಳ ಮಾಲೀಕರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ತಡೆಯಾಜ್ಞೆಯಿಂದಾಗಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗುವ ಸೌಲಭ್ಯ ಮುಂದುವರೆಯಲಿದ್ದು, ಜನಸಾಮಾನ್ಯರಿಗೆ ತಾತ್ಕಾಲಿಕವಾಗಿ ನಿರಾಳವಾಗಿದೆ.

ನ್ಯಾಯಾಲಯದ ಕ್ರಮವನ್ನು ಸ್ವಾಗತಿಸಿರುವ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸರ್ಕಾರದ ಜನಪರ ಕಾರ್ಯಗಳನ್ನು ವಿರೋಧಿಸುವ ಏಕೈಕ ಉದ್ದೇಶದಿಂದ ರಾಜ್ಯದ ಸಾರ್ವಜನಿಕರಿಗೆ ಸಂಕಷ್ಟ ನೀಗಿಸುವುದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವ್ಯತಿರಿಕ್ತ ಅಭಿಪ್ರಾಯ ರೂಪಿಸುವ ಕಾರಣದಿಂದ ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದ್ದು, ಅದರ ಜನವಿರೋಧಿ ನೀತಿಯನ್ನು ವ್ಯಕ್ತಪಡಿಸುತ್ತದೆ. ನ್ಯಾಯಾಲಯದ ಕ್ರಮವು ರಾಜ್ಯ ಸರ್ಕಾರಕ್ಕೆ ದೊಡ್ಡ ಮುಖಭಂಗವಾಗಿದ್ದು, ಜನವಿರೋಧಿ ಕ್ರಮಗಳಿಗೆ ತಡೆ ನೀಡುವ ವಿಕೃತ ಮನೋಭಾವಕ್ಕೆ ಚಾಟಿ ಏಟು ಕೊಟ್ಟಂತಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜನೌಷಧಿ ಕೇಂದ್ರಗಳ ಪುನರಾರಂಭಕ್ಕೆ ಸಂಸದ ಕಾರಜೋಳ ಆಗ್ರಹ

ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ (PMBJP) ಅಡಿಯಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಜೆನೆರಿಕ್ ಔಷಧಿಗಳನ್ನು ಒದಗಿಸುವ ಗುರಿ ಹೊಂದಿದೆ. ಕರ್ನಾಟಕದಲ್ಲಿ ನೂರಾರು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಿವೆ.

Share This Article