PSI Scam: ರದ್ದಾಗಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಡಿ.23ಕ್ಕೆ ಮರು‌ ಪರೀಕ್ಷೆ

Public TV
1 Min Read

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA), ಹಗರಣದಿಂದ ರದ್ದಾಗಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ ‌23 ರಂದು ಬೆಂಗಳೂರಿನಲ್ಲಿ ನಡೆಸಲಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್ಐ‌ (PSI Scam) ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು‌ ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: PSI Scam: ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಆದೇಶ – ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

2021ರ ಜನವರಿ 21ರಂದು ಪೊಲೀಸ್‌ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಟಿಸಿತ್ತು. ಅದೇ ವರ್ಷದ ಅಕ್ಟೋಬರ್‌ 3 ರಂದು ಲಿಖಿತ ಪರೀಕ್ಷೆ ನಡೆದಿತ್ತು. ಆದರೆ ಪರೀಕ್ಷೆಯಲ್ಲಿ ಅಕ್ರಮ ನಡೆದ ಕಾರಣ ರದ್ದುಗೊಳಿಸಲಾಗಿತ್ತು.

ಏನಿದು ಪ್ರಕರಣ?
ಸುಮಾರು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ‌ ಬಗ್ಗೆ ದೂರು ದಾಖಲಾಗಿ ಅಂದಿನ ಸರ್ಕಾರ ತನಿಖೆ ನಡೆಸಿತ್ತು. ಎಡಿಜಿಪಿ, ಪರೀಕ್ಷೆ ಬರೆದ ಅಭ್ಯರ್ಥಿಗಳು ಸೇರಿ ಸುಮಾರು 110 ಕ್ಕೂ ಹೆಚ್ಚು ಜನರನ್ನ ಪರೀಕ್ಷಾ ಅಕ್ರಮದಡಿ ಬಂಧಿಸಲಾಗಿತ್ತು. ತನಿಖೆ ವೇಳೆ ಅಕ್ರಮ ಆಗಿರುವುದು ಬೆಳಕಿಗೆ ಬಂದಿತ್ತು. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇದನ್ನೂ ಓದಿ: PSI scam – ಇಂದು ಹೈಕೋರ್ಟ್‍ನಲ್ಲಿ ಮರುಪರೀಕ್ಷೆ ಅರ್ಜಿ ವಿಚಾರಣೆ

ಅಕ್ರಮದ ಹಿನ್ನಲೆಯಲ್ಲಿ ಆಯ್ಕೆಯಾಗದ ಅಭ್ಯರ್ಥಿಗಳು ಮರು ಪರೀಕ್ಷೆ ಆಗಬೇಕು ಅಂತ ಕೋರ್ಟ್‌ಗೆ ಮನವಿ ಮಾಡಿದ್ದರು. ಆಯ್ಕೆ ಆದ ಅಭ್ಯರ್ಥಿಗಳು ಮರು ಪರೀಕ್ಷೆಗೆ ವಿರೋಧ ವ್ಯಕ್ತಪಡಿಸಿದ್ದರು. ಕೋರ್ಟ್‌ನಲ್ಲಿ ವಾದ-ಪ್ರತಿವಾದ ನಡೆದು ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶ ಮಾಡಿತ್ತು.

Share This Article