ಬಿಎಸ್‍ವೈ ಸೇರಿದಂತೆ ಬಿಜೆಪಿ ಹೈಕಮಾಂಡ್‍ಗೆ ತಲೆನೋವಾದ ಕೇಸ್

Public TV
1 Min Read

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳು ಹೈಕಮಾಂಡ್ ಮಟ್ಟದಲ್ಲಿ ಲಾಭಿ ಮಾಡಲು ಮುಂದಾಗೋದು ಸಾಮಾನ್ಯ. ಅಂತೆಯೇ ರಾಜ್ಯ ಬಿಜೆಪಿಯಲ್ಲಿಯೂ ಅಸಮಧಾನದ ಹೊಗೆ ಕಾಣಿಸಿಕೊಂದ್ದು, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹೈಕಮಾಂಡ್ ಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ತಲೆನೋವಾಗಿ ಪರಿಣಮಿಸಿದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚುನಾವಣೆಗೆ ನೀವೇ ಅಭ್ಯರ್ಥಿ ಎಂದು ಹೇಳಿ ಮಾಜಿ ಡಿಸಿಎಂ ಆರ್.ಅಶೋಕ್ ಪಕ್ಷಕ್ಕೆ ಕರೆತಂದಿದ್ದರಂತೆ. ಇದೀಗ ಜಯಪ್ರಕಾಶ್ ಹೆಗ್ಡೆ ಟಿಕೆಟ್ ನೀಡಬೇಕೆಂದು ಬಿಗಿಪಟ್ಟು ಹಿಡಿದಿದ್ದಾರಂತೆ. ಇತ್ತ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಮಾತ್ರ ಟಿಕೆಟ್ ನನಗೆ ಬೇಕು ಎಂದು ಪಕ್ಷದ ಮುಖಂಡರ ಮುಂದೆ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:‘ಶೋಭಕ್ಕನ ಮನೆಗೆ ಕಳ್ಸಿ, ಮೋದಿಯನ್ನ ಉಳಿಸಿ’- ಎಲೆಕ್ಷನ್ ಹೊತ್ತಲ್ಲಿ ಬಿಜೆಪಿಯಿಂದ್ಲೇ ಅಭಿಯಾನ

ಹಾಲಿ ಸಂಸದರಿಗೆ ಟಿಕೆಟ್ ಅಂತಾದ್ರೆ ನನಗೂ ಟಿಕೆಟ್ ಕೊಡಲೇಬೇಕು. ಪಕ್ಷದ ವರಿಷ್ಠರಿಗೆ ಗೊತ್ತಿಲ್ಲದೇ ಆರ್.ಅಶೋಕ್ ಮಾತು ಕೊಟ್ಟಿದ್ದು ತಪ್ಪು ಎಂದು ಶೋಭಾ ಕರಂದ್ಲಾಜೆ, ರಾಜ್ಯಾಧ್ಯಕ್ಷರ ಮುಂದೆ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.

ಸಂಸದರಾದ ಬಳಿಕ ಕ್ಷೇತ್ರವನ್ನೇ ಮರೆತಿದ್ದೀರಿ, ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತ್ಯಕ್ಷವಾಗಿದ್ದೀರಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಂಸದೆ ಶೋಭಾ ಕರಂದ್ಲಾಜೆ ತರೀಕೆರೆಗೆ ರೈಲ್ವೆ ಫ್ಲಾಟ್ ಫಾರಂ ಮೇಲ್ದರ್ಜೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದರು. ಈ ವೇಳೆ, ವಕೀಲರು ಹಾಗೂ ತರೀಕೆರೆ ಸಾರ್ವಜನಿಕರು ಹೆದ್ದಾರಿ ಅಗಲೀಕರಣ ಹಾಗೂ ದುರಸ್ತಿ ಮಾಡುವಂತೆ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಗಾಂಧಿ ವೃತ್ತದಲ್ಲಿ ವಕೀಲರು ಮಾನವ ಸರಪಳಿ ನಿರ್ಮಿಸಿ ಸಂಸದರ ವಿರುದ್ಧ ಕಿಡಿಕಾರಿದ್ರು. ಒಂದು ಗಂಟೆಗೂ ಹೆಚ್ಚು ಹೊತ್ತು ರಾಷ್ಟ್ರೀಯ ಹೆದ್ದಾರಿ 206ರನ್ನ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *