ಐವತ್ತು ಸಿನಿಮಾ ಪೂರೈಸಿದ ಲೂಸ್ ಮಾದ ಯೋಗಿ

Public TV
1 Min Read

ದುನಿಯಾ (Duniya) ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ ಯೋಗಿ ಅಲಿಯಾಸ್ ಲೂಸ್ ಮಾದ ಯೋಗಿ (Loose Mada Yogi) ಈವರೆಗೂ ಬರೋಬ್ಬರಿ ಐವತ್ತು ಸಿನಿಮಾ ಪೂರೈಸಿದ್ದಾರೆ. ಅವರ ಐವತ್ತನೇ ಚಿತ್ರಕ್ಕೆ ‘ರೋಜಿ’ (Rosie) ಎಂದು ಹೆಸರಿಡಲಾಗಿದೆ. ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಮುಹೂರ್ತ ಸಮಾರಂಭ ಇತ್ತೀಚೆಗೆ ನವರಂಗ್ ಚಿತ್ರಮಂದಿರದಲ್ಲಿ ನಡೆಯಿತು. ಡಾಲಿ ಧನಂಜಯ (Dolly Dhananjay) ಚಿತ್ರದ ಶೀರ್ಷಿಕೆ ಅನಾವರಣ ಮಾಡಿ, ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

ಹೆಡ್ ಬುಷ್ ಚಿತ್ರದ ನಂತರ ಶೂನ್ಯ (Shoonya ) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಡಿ.ವೈ.ರಾಜೇಶ್ ಹಾಗೂ ಡಿ.ವೈ.ವಿನೋದ್ ನಿರ್ಮಾಣ ಮಾಡುತ್ತಿದ್ದಾರೆ. ಯೋಗಿ ನನ್ನ ಆತ್ಮೀಯ ಗೆಳೆಯ. ‘ರೋಜಿ’  ಯೋಗಿ ಅಭಿನಯದ 50ನೇ ಸಿನಿಮಾ ಎಂದು ತಿಳಿದು ಸಂತೋಷವಾಯಿತು. ಶೂನ್ಯ ಕೂಡ ನಮ್ಮ ಸಂಸ್ಥೆಯ ನಿರ್ಮಾಣದ ಹೆಡ್ ಬುಷ್ ಚಿತ್ರ ನಿರ್ದೇಶನ ಮಾಡಿದ್ದರು. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಡಾಲಿ ಹಾರೈಸಿದರು.

ಇದು ನನ್ನ ಐವತ್ತನೇ ಚಿತ್ರ. ನಾನು ಈ ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನ ಪಾತ್ರ ಎನ್ನಬಹುದು. ಶೂನ್ಯ ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ಶೀರ್ಷಿಕೆ ಬಿಡುಗಡೆ ಮಾಡಿ, ಶುಭ ಹಾರೈಸಿದ ಸ್ನೇಹಿತ ಡಾಲಿ ಧನಂಜಯ ಅವರಿಗೆ ಧನ್ಯವಾದ ಎಂದರು ನಾಯಕ ಯೋಗಿ.

ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ಎಲ್ಲರೂ ನೀಡಿದ್ದ ಪ್ರೋತ್ಸಾಹಕ್ಕೆ ಚಿರ ಋಣಿ. ಈಗ ನನ್ನ ನಿರ್ದೇಶನದ ಎರಡನೇ ಚಿತ್ರ ರೋಜಿಗೆ ಚಾಲನೆ ಸಿಕ್ಕಿದೆ. ಚಿತ್ರದಲ್ಲಿ ಯೋಗಿ ಅವರ ಹೆಸರೆ ರೋಜಿ.  ಚಿತ್ರರಂಗದವರಿಗೆ ಚಿತ್ರಮಂದಿರ ದೇವಸ್ಥಾನವಿದಂತೆ. ಹಾಗಾಗಿ ನಮ್ಮ ಚಿತ್ರವನ್ನು ಚಿತ್ರಮಂದಿರದಲ್ಲಿ ಆರಂಭಿಸಿದ್ದೇವೆ.  ಮೇ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಶೂನ್ಯ ತಿಳಿಸಿದರು.

Share This Article