ಮಧ್ಯಪ್ರದೇಶದಲ್ಲಿ ಕಮಲನಾಥ್ ಸಂಪುಟದ ಎಲ್ಲ ಸಚಿವರ ರಾಜೀನಾಮೆ

Public TV
2 Min Read

ಭೋಪಾಲ್: ಮಧ್ಯಪ್ರದೇಶದಲ್ಲಿ ಸರ್ಕಾರ ಉಳಿಸಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಸಿಎಂ ಕಮಲನಾಥ್ ಅವರು ಎಲ್ಲ ಸಂಪುಟದ ಎಲ್ಲ ಸಚಿವರಿಂದ ರಾಜೀನಾಮೆ ಪಡೆದುಕೊಂಡಿದ್ದಾರೆ.

ಈಗಾಗಲೇ 18 ಮಂದಿ ಕೈ ಶಾಸಕರು ಬೆಂಗಳೂರು ತಲುಪಿದ್ದಾರೆ. ಈ ಶಾಸಕರಿಗೆ ಮಂತ್ರಿ ಸ್ಥಾನ ನೀಡಲು ಕೊನೆಯ ಪ್ರಯತ್ನವಾಗಿ  ಕಮಲನಾಥ್ ಈ ದಾಳ ಉರುಳಿಸಿದ್ದಾರೆ ಎಂದು ವರದಿಯಾಗಿದೆ.

ಒಂದು ವೇಳೆ ಕಮಲನಾಥ ಸರ್ಕಾರ ಪತನಗೊಂಡರೆ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸಿಎಂ ಹುದ್ದೆಯ ಆಫರ್ ಅನ್ನು ಬಿಜೆಪಿ ನೀಡಿದೆ ಎನ್ನಲಾಗುತ್ತಿದೆ. ಈ ವಿದ್ಯಮಾನಗಳ ನಡುವೆ  ರಾಜೀನಾಮೆ ಪಡೆದುಕೊಂಡಿದ್ದು ರಾತ್ರಿ ಭಾರೀ ಬೆಳವಣಿಗೆ ನಡೆಯುತ್ತಿದೆ.

ಮಧ್ಯಪ್ರದೇಶದ 6 ಸಚಿವರು, 12 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.

ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು.

 

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ಮಂದಿ ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗುತ್ತಿದೆ.

ಕಮಲನಾಥ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲ ಮಾಡ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ನಮಗೂ ಇದಕ್ಕೂ ಸಂಬಂಧ ಇಲ್ಲ ಎನ್ನುತ್ತಿದೆ. ಕಳೆದ ಒಂದು ವಾರದಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಸರ್ಕಾರ ಉಳಿಸಿಕೊಳ್ಳಲು ಕಮಲ್‍ನಾಥ್ ಭಾರೀ ಕಸರತ್ತು ನಡೆಸಿದ್ದಾರೆ.

ಇಂದು ಬೆಳಗ್ಗೆ ಸೋನಿಯಾ ಗಾಂಧಿ ಅವರನ್ನು ಕಮಲನಾಥ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಮತ್ತು ರಾಜ್ಯಸಭಾ ಚುನಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಬೆಳಗ್ಗೆ ಕಮಲನಾಥ್ ಚರ್ಚೆ ನಡೆಸಿದ್ದರೆ ಸಂಜೆಯ ವೇಳೆ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದಾರೆ.

ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 114, ಬಿಜೆಪಿ 109, ಪಕ್ಷೇತರ 1, ಬಿಎಸ್‍ಪಿ 2, ಎಸ್‍ಪಿ 2 ಕ್ಷೇತ್ರದಲ್ಲಿ ಜಯಗಳಿಸಿದೆ. 2019ರ ಲೋಕಸಭಾ ಚುನಾವಣೆಯ ಒಟ್ಟು 29 ಕ್ಷೇತ್ರಗಳ ಪೈಕಿ ಬಿಜೆಪಿ 28 ರಲ್ಲಿ ಗೆದ್ದಿದ್ದರೆ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಗಳಿಸಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಏರಿದ ಬಳಿಕ ಕಮಲನಾಥ್ ಮತ್ತು ಸಿಂಧಿಯಾ ನಡುವಿನ ಮುಸುಕಿನ ಗುದ್ದಾಟ ಬೀದಿಗೆ ಬಂದಿತ್ತು. ಚುನವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಭರವಸೆ ಈಡೇರಿಸದೇ ಇದ್ದಲ್ಲಿ ಬೀದಿಯಲ್ಲಿ ನಿಂತು ಹೋರಾಟ ಮಾಡುವುದಾಗಿ ಸಿಂಧಿಯಾ ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಮೋದಿ ಸರ್ಕಾರವನ್ನು ಸಿಂಧಿಯಾ ಶ್ಲಾಘಿಸಿ ಬೆಂಬಲಿಸಿ ಟ್ವೀಟ್ ಮಾಡಿದ್ದು ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

https://twitter.com/JM_Scindia/status/1158729410507182080?

2019ರ ಅಕ್ಟೋಬರ್ ನಲ್ಲಿ ಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಫ್ಲೆಕ್ಸ್ ಹಾಕಿತ್ತು. ಸಿಂಧಿಯಾ ಅವರ ಬಿಂಡ್ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಈ ಪ್ಲೆಕ್ಸ್ ಹಾಕಿಸಿದ್ದರು. ಸಿಂಧಿಯಾ ಅವರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರಗಳು ಅದರಲ್ಲಿ ರಾರಾಜಿಸಿದ್ದವು.

Share This Article
Leave a Comment

Leave a Reply

Your email address will not be published. Required fields are marked *