– ರೈಲು ಸೇವೆಯಲ್ಲಿ ವ್ಯತ್ಯಯ
ಚೆನ್ನೈ: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ (Goods Train) 4 ವ್ಯಾಗನ್‌ಗಳಲ್ಲಿ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ತಮಿಳುನಾಡಿನ (Tamil Nadu) ತಿರುವಲ್ಲೂರು (Tiruvallur) ರೈಲು ನಿಲ್ದಾಣದ ಬಳಿ ನಡೆದಿದೆ.
ಇಂದು ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿದೆ. ಬೆಂಕಿ ಅವಘಡದಿಂದ ರೈಲು ಹೊತ್ತಿ ಉರಿದಿದ್ದು, ಆಕಾಶದಲ್ಲಿ ಕಪ್ಪು ದಟ್ಟಹೊಗೆ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ರೈಲಿನಲ್ಲಿ ಡೀಸೆಲ್ ಇದ್ದ ಕಾರಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಇದನ್ನೂ ಓದಿ: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ – ಮೂವರ ದುರ್ಮರಣ
ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಮನಾಲಿಯಿಂದ ತಿರುಪತಿ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹತ್ತಿರದ ಪ್ರದೇಶಗಳ ಜನರನ್ನು ಸ್ಥಳಾಂತರಿಸಲಾಗಿದೆ. ಘಟನೆಗೆ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದಾಗಿ ಚೆನ್ನೈಗೆ ತೆರಳುವ ಮತ್ತು ಅಲ್ಲಿಂದ ಹೊರಡಬೇಕಿದ್ದ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ. ರೈಲು ಹಳಿ ತಪ್ಪಿ ಪಲ್ಟಿಯಾಗಿ, ಡೀಸೆಲ್ ಸೋರಿಕೆಯಿಂದ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ