540 ಗಸ್ತು ಅರಣ್ಯ ರಕ್ಷಕರ ನೇಮಕಾತಿಗೆ ಪ್ರಕ್ರಿಯೆ: ಈಶ್ವರ್ ಖಂಡ್ರೆ

Public TV
2 Min Read

ಬೆಂಗಳೂರು: ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, ಈಗಾಗಲೇ 310 ಅರಣ್ಯ ವೀಕ್ಷಕರ ನೇಮಕಾತಿ ಮಾಡಲಾಗಿದೆ. ಈಗ 540 ಅರಣ್ಯ ರಕ್ಷಕರ (ಗಾರ್ಡ್) ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಕೇಶವ್ ಪ್ರಸ್ತಾಪ ಪ್ರಶ್ನೆ ಕೇಳಿದರು. ಆನೆ ತುಳಿತದಿಂದ ಸತ್ತವರಿಗೆ 20 ಲಕ್ಷ ಪರಿಹಾರ ಕೊಡ್ತೀರಾ. ಅದೇ ರೀತಿ ಬೇರೆ ಪ್ರಾಣಿಯಿಂದ ಸತ್ತವರಿಗೆ 20 ಲಕ್ಷ ಪರಿಹಾರ ಕೊಡಿ. ಹುಲಿಗಳ ಸಾವು ಆಯ್ತು. ಅದರ ಬಗ್ಗೆ ಕ್ರಮ ಮಾಡಬೇಕು. ಹಾವು ಕಡಿತದಿಂದ ಸತ್ತವರಿಗೂ ಸರ್ಕಾರ ಪರಿಹಾರ ಕೊಡಬೇಕು. ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು ಎಂದು ಒತ್ತಾಯ ಮಾಡಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಕೇಸ್ ಹಾಕಿ: ಅಶ್ವಥ್ ನಾರಾಯಣ್ ಆಗ್ರಹ

ಇದಕ್ಕೆ ಸಚಿವ ಈಶ್ವರ್ ಖಂಡ್ರೆ ಉತ್ತರ ನೀಡಿ, ಕಾಡಾನೆ ದಾಳಿ, ಹುಲಿ ದಾಳಿ ಸೇರಿದಂತೆ ವನ್ಯಜೀವಿ ದಾಳಿಯಿಂದ ಮೃತಪಟ್ಟವರಿಗೆ ಪ್ರಸ್ತುತ 20 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಹಾವು ಕಚ್ಚಿ ಮೃತಪಟ್ಟವರಿಗೆ ಕೃಷಿ ಇಲಾಖೆಯ ವತಿಯಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಸರ್ಕಾರ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕವಾಗಿ ಆನೆ ಕಾರ್ಯಪಡೆಯನ್ನು ಮಂಜೂರು ಮಾಡಲು ಸೂಚಿಸಲಾಗಿದ್ದು, 2-3 ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು. ಈ ಪಡೆಯಲ್ಲಿ 32 ಸಿಬ್ಬಂದಿ ಇರುತ್ತಾರೆ. ಅವರು ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯದ ಜೊತೆಗೆ ಪುಂಡಾನೆ ಸೆರೆ ಕಾರ್ಯಾಚರಣೆಯಲ್ಲೂ ಸಹಕರಿಸಲಿದ್ದಾರೆ ಎಂದರು.

ಆನೆಪಥ (ಕಾರಿಡಾರ್) ಮತ್ತು ಆವಾಸಸ್ಥಾನ ಸಂರಕ್ಷಣೆಗಾಗಿ ಅಧ್ಯಯನ ನಡೆಸಲು ಭಾರತೀಯ ವಿಜ್ಞಾನ ಮಂದಿರ (ಐಐಎಸ್‌ಸಿ) ದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಪ್ರೊ. ಆರ್.ಸುಕುಮಾರ್ ಅವರ ತಂಡ ಅಧ್ಯಯನ ಆರಂಭಿಸಿದೆ ಎಂದು ತಿಳಿಸಿದರು. ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿದ್ದು, ಅತ್ಯಂತ ನೋವಿನ ಸಂಗತಿ. ಈಗಾಗಲೇ ತಪ್ಪಿತಸ್ಥರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗಿದೆ.

ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿಸುವಲ್ಲಿ ವಿಫಲರಾದ ಉಪ ವಲಯ ಅರಣ್ಯಾಧಿಕಾರಿ ಸೇರಿ ಅಧಿಕಾರಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ತನಿಖೆ ಮುಂದಿನ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.

Share This Article