ಹೈದರಾಬಾದ್: ಮಹಿಳೆ ಮತ್ತು ಆಕೆಯ ಸೊಸೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ ಮೈಲಾರ್ ದೇವ್ಪಲ್ಲಿ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ನಬೀನಾ ಬೇಗಮ್ (55) ಮತ್ತು ಅವರ ಸೊಸೆ ತಯಾಬ್(25) ಎಂದು ಗುರುತಿಸಲಾಗಿದೆ. ಇವರು ತಮ್ಮ ನಿವಾಸದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ರಾತ್ರಿ ಇಬ್ಬರು ಮಹಿಳೆಯರನ್ನು ಅವರ ಮನೆಯಲ್ಲಿ ಕೊಲೆ ಮಾಡಲಾಗಿದೆ ಎಂದು ನಮಗೆ ಮಾಹಿತಿ ಬಂದಿತ್ತು. ತಕ್ಷಣ ನಾವು ಘಟನೆ ಸ್ಥಳಕ್ಕೆ ಹೋಗಿ ನೋಡಿದಾಗ ಇಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅಪರಿಚಿತ ವ್ಯಕ್ತಿಗಳು ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯಕ್ಕೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಷ್ಟೇ ಅಲ್ಲದೇ ಕೊಲೆಯಾದ ಸ್ಥಳದಲ್ಲಿ ಕೆಲವು ಫಿಂಗರ್ ಪ್ರಿಂಟ್(ಬೆರಳಚ್ಚು)ಗಳು ಕಂಡು ಬಂದಿದೆ. ಮಹಿಳೆ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು, ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.
ಸದ್ಯಕ್ಕೆ ಈ ಕುರಿತು ನಾವು ಪೊಲೀಸರು ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.