ದೆಹಲಿ ಅಗ್ನಿ ಅವಘಡ- ಕಟ್ಟಡದ ಮಾಲೀಕನ ಬಂಧನ

Public TV
1 Min Read

ನವದೆಹಲಿ: ಕೃಷಿ ಮಾರುಕಟ್ಟೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಕಟ್ಟಡ ಮಾಲೀಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಂದು ಬೆಳಗಿನ ಜಾವ ರಾಣಿ ಝಾನ್ಸಿ ರಸ್ತೆ ಅನಾಜ್ ಮಂಡಿ ಕಾರ್ಖಾನೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ 43 ಜನ ಸಾವನ್ನಪ್ಪಿದ್ದಾರೆ. ಸುಮಾರು 30 ಅಗ್ನಿ ಶಾಮಕ ವಾಹನಗಳು ಕಾರ್ಯನಿರ್ವಹಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ಮಾಲೀಕ ರೆಹಾನ್‍ನನ್ನು ಪೊಲೀಸರು ಬಂಧಿಸಿದ್ದಾರೆ.

ಕಟ್ಟಡವು ಅಗ್ನಿಶಾಮಕ ಸುರಕ್ಷತಾ ಪರಿಕರಗಳನ್ನು ಹೊಂದಿರಲಿಲ್ಲ ಎಂದು ಆರೋಪಿಸಲಾಗಿತ್ತು. ಪ್ರಕರಣದ ಸಂಬಂಧ ಕಟ್ಟಡ ಮಾಲೀಕನ ವಿರುದ್ಧ ಐಪಿಸಿ ಸೆಕ್ಷನ್ 304(ಉದ್ದೇಶ ಪೂರ್ವಕ ಅಲ್ಲದ ಕೊಲೆ)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಉತ್ತರ ದೆಹಲಿಯ ರಾಣಿ ಜಾನ್ಸಿ ರಾಣಿ ರಸ್ತೆಯಲ್ಲಿರುವ ಅನಾಜ್ ಮಂಡಿ ಪ್ರದೇಶದ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಹೊಗೆಯಿಂದ ಉಸಿರುಗಟ್ಟಿ 8 ಮಂದಿ ಆಸ್ಪತ್ರೆಗೆ ದಾಖಲಾದರೆ, ಸುಮಾರು 15 ಮಂದಿ ದುರ್ಘಟನೆಯಿಂದ ಗಾಯಗೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಓರ್ವನ ದೇಹ ಶೇ.80ರಷ್ಟು ಸುಟ್ಟಿದ್ದು, ಹೀಗೆ ಹಲವಾರು ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಗ್ನಿ ಅವಘಡದಲ್ಲಿ 43 ಜನ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಇಂದು ಮುಂಜಾನೆ 5.22ರ ಸುಮಾರಿಗೆ ನಡೆದ ಈ ಅವಘಡ ಸಂಬಂಧ ತನಿಖೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದು, ವಾರದೊಳಗೆ ಸಂಪೂರ್ಣ ವರದಿ ನೀಡುವಂತೆ ಸೂಚಿಸಿದ್ದಾರೆ.

ದುರ್ಘಟನೆ ನಡೆದ ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಸಿಎಂ, ಮೃತಪಟ್ಟ ಪ್ರತಿಯೊಬ್ಬ ಕಾರ್ಮಿಕನ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಹಾಗೂ ಗಾಯಗೊಂಡವರ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದಾರೆ.

ಘಟನೆ ನಡೆದ ಬಳಿಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಗೃಹ ಸಚಿವ ಅಮಿತ್ ಶಾ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸಂತಾಪ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *