ಅಭಿಷೇಕ್ ನಿಂತ್ರೂ ಅವರ ವಿರುದ್ಧ ಪ್ರಚಾರ ಮಾಡ್ತೀನಿ: ನಿಖಿಲ್ ಕುಮಾರ್

Public TV
2 Min Read

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹಿರಿಯ ನಟ ಅಂಬರೀಶ್ ಅವರ ಪುತ್ರ ಅಭಿಷೇಕ್ ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿದ್ರೆ ನಾನು ಅಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ, ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಸೀತಾರಾಮ ಕಲ್ಯಾಣ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಕುಮಾರ್, ಈಗಾಗಲೇ ನಾನು ರಾಜಕೀಯದಲ್ಲಿದ್ದೇನೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದೆ. ಎಲ್ಲಿಯೇ ನಮ್ಮ ಅಭ್ಯರ್ಥಿಗಳು ನಿಂತರೂ ಅವರ ಪರವಾಗಿ ಪ್ರಚಾರ ಮಾಡುತ್ತೇನೆ. ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿದರೆ ಜೆಡಿಎಸ್ ಪರವಾಗಿ ಪ್ರಚಾರ ಮಾಡುತ್ತೇನೆ. ಕಾಂಗ್ರೆಸ್‍ನಿಂದ ಅಭಿಷೇಕ್ ಸ್ಪರ್ಧೆ ಮಾಡಿದ್ರೂ ನಾನು ಜೆಡಿಎಸ್ ಪರವಾಗಿಯೇ ಪ್ರಚಾರ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಅಭಿಷೇಕ್ ಮತ್ತು ನಿಖಿಲ್ ಸ್ಪರ್ಧೆ ಮಾಡ್ತಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ವಿಷಯವಾಗಿ ಅಭಿ ಮತ್ತು ನಾನು ಫೋನ್ ನಲ್ಲಿ ಮಾತಾಡಿದ್ದುಂಟು. ಚುನಾವಣೆಗೆ ಸ್ಪರ್ಧೆ ಮಾಡ್ತೀರಾ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಕುಮಾರ್, ಪಕ್ಷದ ಮುಖಂಡರು ಮತ್ತು ಹಿರಿಯರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ:  ಅಂಬರೀಶ್ ಕುಟುಂಬಕ್ಕೆ ಪರೋಕ್ಷವಾಗಿ ಮಂಡ್ಯ ಟಿಕೆಟ್ ನಿರಾಕರಿಸಿದ ಸಿಎಂ ಎಚ್‍ಡಿಕೆ

ಈಗಾಗಲೇ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸೋದು ಬಹುತೇಕ ಖಚಿತವಾಗಿದೆ. ಇತ್ತ ನಿಖಿಲ್ ಕುಮಾರಸ್ವಾಮಿ ಸಹ ಚುನಾವಣಾ ಅಖಾಡಕ್ಕೆ ಇಳಿಯಲು ದೊಡ್ಡಗೌಡರು ಗ್ರೀನ್ ಸಿಗ್ನಲ್ ನೀಡ್ತಾರಾ ಎಂಬುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಅಭಿಷೇಕ್ ಅವರನ್ನು ಕಾಂಗ್ರೆಸ್‍ನಿಂದ ಟಿಕೆಟ್ ನೀಡಬೇಕು ಎಂಬ ಮಾತುಗಳ ಕೈ ಪಾಳಯದಲ್ಲಿ ಕೇಳಿ ಬರುತ್ತಿವೆ.

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೈತ್ರಿ ರಚಿಸಿಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಮಂಡ್ಯದಿಂದ ಯಾರಿಗೆ ಟಿಕೆಟ್ ನೀಡುತ್ತೆ ಎಂಬ ವಿಚಾರ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ. 2018ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿತ್ತು. ಚುನಾವಣೆಯಲ್ಲಿ ಶಿವರಾಮೇಗೌಡರು ಗೆಲುವು ಸಾಧಿಸಿ ಸಂಸದರಾಗಿದ್ದಾರೆ. ಇದೇ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಮಾಜಿ ಸಂಸದೆ ರಮ್ಯಾ ಮತ್ತು ಜೆಡಿಎಸ್ ನಾಯಕಿ ಲಕ್ಷ್ಮಿ ಅಶ್ವಿನ್‍ಗೌಡ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಹಾಲಿ ಸಂಸದರಾಗಿರುವ ಶಿವರಾಮೇಗೌಡರು ಜೆಡಿಎಸ್ ಟಿಕೆಟ್‍ನ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *