ಉಪಚುನಾವಣೆಯ ಎಲ್ಲ 15 ಕ್ಷೇತ್ರಗಳಲ್ಲಿಯೂ ಕೈ ಸ್ವತಂತ್ರವಾಗಿ ಸ್ಪರ್ಧೆ- ದಿನೇಶ್ ಗುಂಡೂರಾವ್

Public TV
1 Min Read

ಬೆಂಗಳೂರು: ಉಪಚುನಾವಣೆಗೆ ಎಲ್ಲ 15 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲವೊಂದು ಕ್ಷೇತ್ರಗಳಲ್ಲಿ ಕಾಂಗ್ರೆಸ್- ಜೆಡಿಎಸ್ ಪ್ರತಿಸ್ಪರ್ಧಿಗಳಿದ್ದು, ಮತ್ತೆ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್- ಬಿಜೆಪಿ ಪ್ರತಿಸ್ಪರ್ಧಿಗಳಗಿದ್ದಾರೆ. ಹೀಗಾಗಿ ಈ ಉಪಚುನಾವಣೆಯಲ್ಲಿ ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ. 15 ಕ್ಷೇತ್ರಗಳಲ್ಲಿಯೂ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಆಪರೇಷನ್ ಕಮಲದ ಮೂಲಕ ಎಲ್ಲರೂ ಹೋಗಿದ್ದಾರೆ. ಆದರೂ ಇನ್ನು ಎರಡು-ಮೂರು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. 15 ಕ್ಷೇತ್ರಗಳಲ್ಲಿಯೂ ಇಬ್ಬರು ಮೂವರು ಅಭ್ಯರ್ಥಿಗಳು ಇದ್ದಾರೆ. ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಿದೆ ಎಂದರು.

15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಸುತ್ತಿರುವ ಕೇಂದ್ರ ಚುನಾವಣಾ ಆಯೋಗದ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ. 17 ಕ್ಷೇತ್ರಗಳಲ್ಲಿಯೂ ನಾವು ಈಗಾಗಲೇ ಚುನಾವಣಾ ತಯಾರಿ ಮಾಡಿಕೊಂಡಿದ್ದೇವೆ. ಹೊಸಕೋಟೆಯಲ್ಲಿ ಸ್ವಾಭಿಮಾನಿ ಸಮಾವೇಶ ಮಾಡಿದ್ದೇವೆ. ಈಗಾಗಲೇ ಚುನಾವಣೆಗೆ ರಣಕಹಳೆ ಮೊಳಗಿಸಿದ್ದೇವೆ. ಶೇ.90 ರಷ್ಟು ಕಾಂಗ್ರೆಸ್ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ ಎಂದು ವಿವರಿಸಿದರು.

ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಆಪರೇಷನ್ ಕಮಲ ಮಾಡಿ ಮೈತ್ರಿ ಸರ್ಕಾರ ಬೀಳಿಸಿದ್ದು ಇಡೀ ರಾಜ್ಯಕ್ಕೆ ಗೊತ್ತಿದೆ. ಮಸ್ಕಿ, ರಾಜರಾಜೇಶ್ವರಿ ನಗರ ಕ್ಷೇತ್ರದ ಅನರ್ಹ ಶಾಸಕರ ಭವಿಷ್ಯ ಏನಾಗುತ್ತದೆ ಎಂದು ಗೊತ್ತಿಲ್ಲ. ಸ್ಪೀಕರ್ ಆದೇಶದ ಪ್ರಕಾರ 15 ವಿಧಾನಸಭೆಯಲ್ಲಿ ಅನರ್ಹರು ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ನಾವು ಈಗಾಗಲೇ ಸುಪ್ರೀಂನಲ್ಲಿ ಕೇವಿಯಟ್ ಹಾಕಿದ್ದೇವೆ. ಸುಪ್ರೀಂಕೋರ್ಟ್‍ನಲ್ಲಿ ಪ್ರಬಲವಾಗಿ ವಾದ ಮಂಡನೆ ಮಾಡುತ್ತೇವೆ. ಎಲ್ಲರೂ ಸೇರಿ ಚುನಾವಣೆ ಎದುರಿಸುತ್ತೇವೆ ಎಂದರು.

ಕೇಂದ್ರದ ನೆರವು ಅಗತ್ಯವಿಲ್ಲ ಎಂದು ಬಿಜೆಪಿ ಸಂಸದರು ಹೇಳುತ್ತಾರೆ. ಕೇಂದ್ರ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಹೀಗಾಗಿ ಬಿಜೆಪಿ ನಾಯಕರು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಕೇಂದ್ರದಿಂದ ಯಾವುದೇ ನೆರವು ಇದುವರೆಗೂ ಬಂದಿಲ್ಲ ಎಂದು ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದರು.

Share This Article
Leave a Comment

Leave a Reply

Your email address will not be published. Required fields are marked *