ಪ್ರಧಾನಿ ಮೋದಿಗೆ ಅತಿ ದೊಡ್ಡ ಗೆಲುವು: ಸುಪ್ರೀಂ ತೀರ್ಪಿನಲ್ಲಿರುವ ಪ್ರಮುಖ ಅಂಶಗಳು ಏನು?

Public TV
3 Min Read

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಸೋತಿದ್ದ ಪ್ರಧಾನಿ ನರೇಂದ್ರ ಮೋದಿಗೆ ಲೋಕಸಭಾ ಚುನಾವಣೆಗೂ ಮುನ್ನ ಅತಿ ದೊಡ್ಡ ಗೆಲುವಿನ ರೂಪದಲ್ಲಿ ರಫೇಲ್ ತೀರ್ಪು ಪ್ರಕಟವಾಗಿದೆ. ಜೆಟ್ ಖರೀದಿ ಸಂಬಂಧ ಯಾವುದೇ ತನಿಖೆಗೆ ಆದೇಶ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಪ್ರಕಟಿಸಿದೆ.

ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್ ಶರ್ಮಾ, ವಿನೀತಾ ದಾಂಡ, ಆಪ್ ನಾಯಕ ಸಂಜಯ್ ಸಿಂಗ್ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ರಫೇಲ್ ಒಪ್ಪಂದವನ್ನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ವಕೀಲರು ಆಗ್ರಹಿಸಿದ್ದರು. ಈ ಅರ್ಜಿಗಳನ್ನು ಒಟ್ಟಾಗಿಸಿದ್ದ ಮುಖ್ಯ.ನ್ಯಾ ರಂಜನ್ ಗೋಗಯ್ ನೇತೃತ್ವದ ನ್ಯಾ. ಎಸ್‍ಕೆ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿತ್ತು. ನವೆಂಬರ್ 14 ರಂದು ವಿಚಾರಣೆ ಅಂತ್ಯಗೊಳಿಸಿದ್ದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದೆ. ಇದನ್ನೂ ಓದಿ: ರಫೇಲ್ ಡೀಲ್ : ಮೋದಿಗೆ ಬಿಗ್ ರಿಲೀಫ್, ಕೈಗೆ ಮುಖಭಂಗ

ರಫೇಲ್ ಖರೀದಿ ವ್ಯವಹಾರಗಳನ್ನು ನಿಯಮದಡಿಯಲ್ಲಿಯೇ ಮಾಡಲಾಗಿದೆ. ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ಕಂಡುಬಂದಿಲ್ಲ. ಈ ಕಾರಣಕ್ಕೆ ತನಿಖೆ ನಡೆಸಲು ಆದೇಶ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ:ಎಚ್‍ಎಎಲ್ ಜೊತೆ ರಫೇಲ್ ಯೋಜನೆ ಕೈಬಿಟ್ಟಿದ್ದೇಕೆ: ಸ್ಪಷ್ಟನೆ ನೀಡಿದ ರಕ್ಷಣಾ ಸಚಿವೆ

ಸುಪ್ರೀಂ ತೀರ್ಪಿನಲ್ಲಿ ಏನಿದೆ?
– ರಫೇಲ್ ಖರೀದಿ ಒಪ್ಪಂದದಲ್ಲಿ ಸಂದೇಹ ಪಡುವ ಅಗತ್ಯವಿಲ್ಲ. ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವುದಕ್ಕೆ ಯಾವುದಕ್ಕೆ ಸಾಕ್ಷ್ಯಗಳು ಸಿಕ್ಕಿಲ್ಲ. ಗುಣಮಟ್ಟದ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಎದ್ದಿರುವ ಖರೀದಿ ಒಪ್ಪಂದ ಬೆಲೆಯ ಪರಾಮರ್ಶೆ ಮಾಡುವುದು ಕೋರ್ಟ್ ಕೆಲಸವಲ್ಲ.

– ದೇಶಕ್ಕೆ ನಾಲ್ಕು ಮತ್ತು ಐದನೇಯ ತಲೆಮಾರಿನ ಫೈಟರ್ ಜೆಟ್ ಭಾರತೀಯ ವಾಯುಸೇನೆಗೆ ನಿಯೋಜಿಸುವ ಅಗತ್ಯವಿದೆ. ಖರೀದಿ, ಬೆಲೆ ನಿರ್ಣಯ, ದೇಶಿ ಪಾಲುದಾರ ಆಯ್ಕೆ ವಿಚಾರದಲ್ಲಿ ಮಧ್ಯಪ್ರವೇಶಿಸುವ ಅಗತ್ಯ ಕಂಡು ಬರುವುದಿಲ್ಲ. ಒಪ್ಪಂದದಲ್ಲಿ ಭಾಗಿಯಾದ ಎಲ್ಲರೂ ಖರೀದಿ ಹೇಗೆ ನಡೆಯಿತು ಎನ್ನುವ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ. ತುಲಾತ್ಮಕ ಬೆಲೆ ವಿವರವನ್ನು ನೀಡಿ ವಿಮಾನಗಳನ್ನು ಖರೀದಿಸಿ ಎಂದು ಹೇಳುವುದು ಕೋರ್ಟ್ ಕೆಲಸವಲ್ಲ. ಇದನ್ನೂ ಓದಿ:ಒಂದೇ ಯುದ್ಧ ವಿಮಾನ ನಿರ್ಮಿಸದ ರಿಲಯನ್ಸ್ ಕಂಪನಿ ಜೊತೆ ಒಪ್ಪಂದ ಮಾಡಿದ್ದು ಯಾಕೆ: ಪ್ರಶ್ನೆಗೆ ಡಸಾಲ್ಟ್ ಸಿಇಒ ಉತ್ತರ ನೀಡಿದ್ದು ಹೀಗೆ

– ನಾವು ಕೇಳಿದ ಪ್ರಶ್ನೆಗಳಿಗೆ ಸಿಕ್ಕಿದ ಉತ್ತರಿಂದ ನಮ್ಮ ಸಂಶಯ ಪರಿಹಾರವಾಗಿದ್ದು ತೃಪ್ತಿಯಾಗಿದೆ. ರಕ್ಷಣೆಯಂತಹ ಸೂಕ್ಷ್ಮ ವಿಚಾರದಲ್ಲಿ ತನಿಖೆಗೆ ಆದೇಶ ನೀಡುವುದು ಸರಿಯಲ್ಲ. ದೇಶಿ ಪಾಲುದಾರನ ಆಯ್ಕೆ ಮಾಡುವುದು ಕಂಪನಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ.

– ರಫೇಲ್ ಖರೀದಿ ಒಪ್ಪಂದದಲ್ಲಿ ದೇಶಿಯ ಪಾಲುದಾರಿಕೆಯ ಆಯ್ಕೆ ವಿಚಾರದಲ್ಲಿ ವಾಣಿಜ್ಯ ಒಲವು ತೋರಿಸಲಾಗಿದೆ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ಫ್ರಾನ್ಸ್ ಮಾಜಿ ಅಧ್ಯಕ್ಷ ಹೊಲಾಂಡೆ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಿಂದ ರಫೇಲ್ ಜೆಟ್ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಎದ್ದಿದ್ದು ಈ ವಿಚಾರವನ್ನು ನಾವು ನ್ಯಾಯಾಂಗದ ಪರಿಧಿ ವ್ಯಾಪ್ತಿಯಲ್ಲಿ ಪರಾಮರ್ಶೆ ಮಾಡುವುದಿಲ್ಲ.

– 126 ಜೆಟ್ ಬದಲು 36 ಜೆಟ್ ಖರೀದಿ ಒಪ್ಪಂದ ಮಾಡಿಕೊಂಡಿರುವ ಭಾರತ ಸರ್ಕಾರದ ಈ ನಿರ್ಧಾರವನ್ನು ಬದಲಾಯಿಸಿ ಎಂದು ನಾವು ಹೇಳಲು ಸಾಧ್ಯವಿಲ್ಲ. 2016ರ ಸಪ್ಟೆಂಬರ್ ತಿಂಗಳಿನಲ್ಲಿ ಈ ಡೀಲ್ ನಡೆದಾಗ ಯಾರು ಪ್ರಶ್ನೆ ಕೇಳಿರಲಿಲ್ಲ.

– 4 ಮತ್ತು 5ನೇ ತಲೆಮಾರಿನ ಯುದ್ಧ ವಿಮಾನಗಳನ್ನು ವಾಯುಸೇನೆಗೆ ಅಗತ್ಯವಾಗಿದ್ದು, ಈ ವಿಮಾನಗಳನ್ನು ಸೇರ್ಪಡೆಗೊಳಿಸುವಂತಹ ವಿಚಾರದಲ್ಲಿ ಜನರ ವೈಯಕ್ತಿಯ ಗ್ರಹಿಕೆಗಳಿಗಿಂತಲೂ ಸೇನೆಯ ಅಭಿಪ್ರಾಯಗಳನ್ನು ನ್ಯಾಯಾಂಗ ಹೆಚ್ಚು ಪರಾಮರ್ಶಿಸುತ್ತದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *