ಬೆಂಗಳೂರು: ನಗರವಾಸಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru) ಗುಡ್‌ನ್ಯೂಸ್ ಕೊಟ್ಟಿದೆ. ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (ಓಸಿ – Occupancy Certificate) ಪಡೆಯುವುದರಿಂದ ವಿನಾಯ್ತಿ ನೀಡಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಓಸಿಯಿಂದ ವಿನಾಯ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಕಲಂ 241 (7)ರ ಅಡಿಯಲ್ಲಿ 1200 ಚದರ ಅಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ ಅಂತಸ್ತು ಜೊತೆಗೆ 2 ಅಂತಸ್ತು ಅಥವಾ ಸ್ಟಿಲ್ಟ್ ಪಾರ್ಕಿಂಗ್ ಫ್ಲೋರ್ ಜೊತೆಗೆ 3 ಅಂತಸ್ತಿನ ಕಟ್ಟಡಗಳಿಗೆ ಓಸಿ (ಸ್ವಾಧೀನಾನುಭವ ಪ್ರಮಾಣ ಪತ್ರ) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ.
ಈ ಹಿಂದೆಯೇ ರಾಜ್ಯ ಸರ್ಕಾರ ವಿನಾಯ್ತಿ ನೀಡಲು ನಿಯಮಗಳನ್ನು ರಚಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿತ್ತು. ಅದರಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಲಯ ಕಚೇರಿಗಳಿಂದ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ನೀಡಲಾಗುತ್ತಿದೆ.
ಪ್ರತಿ ವರ್ಷ ಈ ರೀತಿ 1,200 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಗಳಲ್ಲಿ ಸುಮಾರು 4,000 ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ನೀಡಲಾಗುತ್ತಿದೆ. ಕಳೆದ ಸಾಲಿನಿಂದ ʻನಂಬಿಕೆ ನಕ್ಷೆʼ ವ್ಯವಸ್ಥೆಯಡಿಯಲ್ಲಿ ಆಟೋಮೇಟೆಡ್ ಆನ್‌ಲೈನ್ ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ನೀಡಲಾಗುತ್ತಿದ್ದು, ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ದಿನದಂದೇ ಕರಡು ನಕ್ಷೆ ಮತ್ತು 15 ದಿನದೊಳಗಾಗಿ ಅಂತಿಮ ನಕ್ಷೆಗೆ ಅವಕಾಶ ಕಲ್ಪಿಸಿದೆ. ಇದರಿಂದ ಸಾರ್ವಜನಿಕರಿಗೆ ಪಾರದರ್ಶಕವಾಗಿ ಹಾಗೂ ಕಾಲಮಿತಿಯೊಳಗೆ ನಕ್ಷೆ ಮಂಜೂರಾತಿ ನೀಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.