ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

Public TV
3 Min Read

ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರು ಇಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂಪಾ ಎಂದೇ ಖ್ಯಾತಿ ಪಡೆದಿರುವ ಚಂದ್ರಶೇಖರ್ ಪಾಟೀಲ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರಿಗೆ ರಾಜಕೀಯ ರಂಗದ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.

ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ಧ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತರಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲ್ ನಿಧನದಿಂದ ದುಃಖಿತನಾಗಿದ್ದೇನೆ. ಇವರ ಕುಟುಂಬ ಹಾಗೂ ಅಭಿಮಾನಿಗಳ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಚಂಪಾ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ, ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರ್‌ಸ್ವಾಮಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಚಂಪಾ ನಿಧನ ನಾಡಿಗೆ ತುಂಬಲಾರದ ನಷ್ಟ: ನಾಡೋಜ ಡಾ. ಮಹೇಶ್‌ ಜೋಶಿ

ಖ್ಯಾತ ಕವಿ, ಚಂಪಾ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ್‌ರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಸಂಘಟನಕಾರರಾಗಿ, ಹೋರಾಟಗಾರರಾಗಿ, ನಾಡಿನ ಸಾಮಾಜಿಕ, ಸಾಂಸ್ಕೃತಿಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದ ಚಂಪಾ ಅವರ ನಿಧನದಿಂದ ನಮ್ಮ ನಾಡು ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮೂಲಕ ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ಚಂಪಾ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ: ಸಿಎಂ ಸಂತಾಪ

ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊ. ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ. ಚಂಪಾ ಎಂದೇ ಪ್ರಸಿದ್ಧರಾದ, ಚಂದ್ರಶೇಖರ್ ಪಾಟೀಲ್ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮವಾದುದು. ಗೋಕಾಕ್ ಚಳುವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೆ ಅವುಗಳಲ್ಲಿ ಮುಂಚೂಣಿಯಾಗಿ ನಿಂತವರು, ಎಂದು ಸಚಿವರು, ಸ್ಮರಿಸಿದ್ದಾರೆ. ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.

ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ಮಾತನಾಡಿ, ಚಂಪಾ ಅವರ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದೆ. ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *