ಪಾಕ್ ಪರ ಘೋಷಣೆ ಕೂಗುವುದು ದೇಶ ದ್ರೋಹದ ಕೆಲಸ: ಎಚ್‍ಡಿಕೆ

Public TV
1 Min Read

ರಾಮನಗರ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎ ವಿರುದ್ಧದ ಹೋರಾಟದ ವೇದಿಕೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಅಮೂಲ್ಯ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಿರುವುದು ಖಂಡನೀಯ. ಇಂತಹ ದೇಶದ್ರೋಹಿಗಳ ಬಗ್ಗೆ ಸಂಘಟನಕಾರರು ಎಚ್ಚರದಿಂದ ಇರಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರಾಮನಗರದಲ್ಲಿ ತಿಳಿಸಿದ್ದಾರೆ.

ರಾಮನಗರದ ಹೊರವಲಯದ ಜನಪದಲೋಕ ಬಳಿ ತಮ್ಮ ಪುತ್ರ ನಿಖಿಲ್ ಮದುವೆ ಹಿನ್ನೆಲೆಯಲ್ಲಿ ಭೂಮಿಗೆ ಶಕ್ತಿ ತುಂಬುವ ವಿಶೇಷ ಹೋಮ, ಹವನ, ಪೂಜಾ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು ಭಾರತೀಯರಾಗಿ ನಮ್ಮ ದೇಶಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಆಕೆ ಉದ್ದೇಶ ಪೂರ್ವಕವಾಗಿ ಹೀಗೆ ಮಾಡಿದ್ದಾಳೋ, ಇಲ್ಲ ಪ್ರಚಾರಕ್ಕಾಗಿ ಮಾಡಿದ್ದಾಳೋ, ಆಕೆಗೆ ಈ ಬಗ್ಗೆ ತಿಳಿವಳಿಕೆ ಇದೆಯೋ, ಇಲ್ಲವೋ ಗೊತ್ತಿಲ್ಲ. ಇಂತಹ ದೇಶ ದ್ರೋಹದ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನಮ್ಮ ಪಕ್ಷದ ಕಾರ್ಯಕರ್ತರಾದ ಇಮ್ರಾನ್ ಸಹ ಕಾರ್ಯಕ್ರಮದ ಸಂಘಟನೆ ಹೊಣೆ ಹೊತ್ತಿದ್ದರು. ಯುವತಿ ಘೋಷಣೆ ಕೂಗಿದ ಕೂಡಲೇ ಆಕೆಯ ಮೈಕ್ ಕಸಿದುಕೊಂಡಿದ್ದಾರೆ. ಹೀಗಾಗಿ ಸಂಘಟನಕರಿಂದ ಆ ರೀತಿಯ ಪ್ರಯತ್ನ ಆಗಿಲ್ಲ ಎಂಬುದು ಸ್ಪಷ್ಟವಾಗಿದೆ. ಮೊದಲು ನಾನು ಭಾರತೀಯ ಎಂಬ ಭಾವನೆ ಇದ್ದಾಗ ಮಾತ್ರ ಹೋರಾಟಕ್ಕೆ ಇತರರು ಕೈಜೋಡಿಸುತ್ತಾರೆ. ಈ ರೀತಿಯ ಅಪಪ್ರಚಾರ ಯಾರಿಗೂ ಬೇಡ ಎಂದರು. ಬಿಜೆಪಿ ಈ ರೀತಿಯ ಪ್ರಯತ್ನಗಳಿಗೆ ಹೆಚ್ಚು ಪ್ರಚಾರ ಮಾಡುವ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಲು ಹೊರಟಿದೆ. ದೇಶಭಕ್ತಿಯ ಬಗ್ಗೆ ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ ಎಂದು ಗುಡುಗಿದರು.

ಹೋರಾಟಗಾರರು ತ್ರಿವರ್ಣ ಧ್ವಜ ಹಿಡಿದು ಹೋರಾಟ ನಡೆಸಿದ್ದಾರೆಯೇ ಹೊರತು ಪಾಕಿಸ್ತಾನದ ಧ್ವಜವನ್ನಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಹಾರಿದ್ದ ರಾಷ್ಟ್ರಧ್ವಜಕ್ಕಿಂತ ಹತ್ತು ಪಟ್ಟು ಧ್ವಜಗಳು ಇಂದು ಹೋರಾಟದ ಹೆಸರಿನಲ್ಲಿ ಹಾರುತ್ತಿವೆ. ಸಂವಿಧಾನ ಕೊಟ್ಟ ಹಕ್ಕನ್ನು ಸಂವಿಧಾನದ ಆಶಯಗಳು ಮತ್ತು ದೇಶವನ್ನು ಯಾರಿಂದಲೂ ಛಿದ್ರಗೊಳಿಸಲು ಆಗದು. ಯಾರೋ ಒಬ್ಬರು ತಿಳಿಗೇಡಿ ಘೋಷಣೆ ಕೂಗಿದ ಮಾತ್ರಕ್ಕೆ ಅದರ ಗಮನವನ್ನು ಬೇರೆ ಕಡೆಗೆ ಸೆಳೆಯುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *