ರಾಜಕೀಯ ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ವಿಧಿವಶ – ಕಂಬನಿ ಮಿಡಿದ ಗಣ್ಯರು

6 Min Read

ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) (Shamanur Shivashankarappa) ಅವರಿಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಗಣ್ಯರು ಕಂಬನಿ ಮಿಡಿದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar), ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಅವರ ಹಾದಿಯಾಗಿ ಹಿರಿಯ ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಮಾಜ ಸೇವೆಗಾಗಿ ಜೀವನ ಮುಡಿಪಾಗಿಟ್ಟವರು: ಡಿಕೆಶಿ
ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಅಂತ ತಿಳಿಸಿದ್ದಾರೆ.

ಮಾದರಿ ವ್ಯಕ್ತಿತ್ವದ ಸಾಧಕರು: ಹೆಚ್‌ಡಿಕೆ
ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. ʻನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು‌ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕೊಡುಗೈ ದಾನಿಯಾಗಿ ಶಾಮನೂರು – ಈಶ್ವರ್‌ ಖಂಡ್ರೆ
ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ವ್ಯಕ್ತಿ ಶಾಮನೂರು ಶಿವಶಂಕರಪ್ಪ. ಈ ಹಿಂದೆ ಅವರು ವಸತಿ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ. ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆ ಬಲಪಡಿಸಲು ಶ್ರಮಿಸಿದ್ದರು. ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನ ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ. ವಿಧಾನಸಭೆಯಲ್ಲಿ ಅತ್ಯಂತ ಹಿರಿಯ ಸದಸ್ಯರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಈ ನೋವಿನ ಸಂದರ್ಭದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಯಾದ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಅವರ ಕುಟುಂಬದ ಎಲ್ಲರಿಗೂ ಶಾಮನೂರ್ ಅಣ್ಣನವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ಶಿವಾನಂದ ಪಾಟೀಲ
ಶಾಮನೂರು ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಖಜಾಂಚಿಯಾಗಿ ಸುದೀರ್ಘ ಅವಧಿಗೆ ಕೆಲಸ ಮಾಡಿರುವ ಅವರು, ಪಕ್ಷ ಸಂಘಟನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಬಾಪೂಜಿ ಶಿಕ್ಷಣ ಸಂಸ್ಥೆ ಮೂಲಕ ದಾವಣಗೆರೆ ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಳಲು ಕಾರಣರಾಗಿದ್ದಾರೆ. ಅವರ ಅಗಲಿಕೆಯಿಂದ ಸಾರ್ವಜನಿಕ ಕ್ಷೇತ್ರಕ್ಕೆ ಅಷ್ಟೇ ಅಲ್ಲ, ಶಿಕ್ಷಣ ಕ್ಷೇತ್ರಕ್ಕೂ ತುಂಬಲಾರದ ನಷ್ಟವ ಉಂಟಾಗಿದೆ. ದಾವಣಗೆರೆ ಜಿಲ್ಲೆಯ ಪ್ರಗತಿ ಅವರ ದೂರದೃಷ್ಟಿಗೆ ಸಾಕ್ಷಿಯಾಗಿದೆ. ಸಚಿವರಾಗಿ, ಲೋಕಸಭಾ ಸದಸ್ಯರಾಗಿ ಅವರ ಕೊಡುಗೆ ಅನನ್ಯ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲು ಪ್ರಧಾರ್ಥಿಸುತ್ತೇನೆ ಎಂದು ಮರುಕ ವ್ಯಕ್ತಪಡಿಸಿದ್ದಾರೆ.

ಸಮಾಜಕ್ಕೆ ತುಂಬಲಾರದ ನಷ್ಟ: ಬೊಮ್ಮಾಯಿ
ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪ ರವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಯಿತು. ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜೊತೆಗೆ ರಾಜ್ಯದ ಶಾಸಕರಾಗಿ ಹಾಗೂ ಸಚಿವರಾಗಿ ದಕ್ಷ ಹಾಗೂ ಪ್ರಾಮಣಿಕತೆಯಿಂದ ಕಾರ್ಯನಿರ್ವಹಿಸಿದ್ದರು. ವಿಶೇಷವಾಗಿ ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಮಾಜವನ್ನು ಮುನ್ನಡೆಸಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಮತ್ತು ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ, ವೀರಶೈವ ಸಮಾಜಕ್ಕೆ ಮತ್ತು ನನಗೆ ವಯಕ್ತಿಕವಾಗಿ ತುಂಬಲಾರದ ಹಾನಿಯಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರ ಶಾಂತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ವಿಜಯೇಂದ್ರ ಸಂತಾಪ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕರು, ಮಾಜಿ ಸಚಿವರಾದ ಶಾಮನೂರು ಶಿವಶಂಕಪ್ಪನವರು ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಉದ್ಯಮಿಯಾಗಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಪ್ರಮುಖರಾಗಿ ಸಮಸ್ತ ಸಮಾಜದ ಏಕತೆ ಮತ್ತು ಏಳಿಗೆಗಾಗಿ ನಿರಂತರ ಶ್ರಮಿಸಿದ್ದ ಇವರ ಅಗಲಿಕೆಯಿಂದ ನಾಡು ಒಬ್ಬ ಹಿರಿಯ ಸಾಧಕ ರಾಜಕಾರಣಿಯನ್ನು, ಸಮುದಾಯ ತನ್ನ ಹಿರಿಯ ಮಾಗದರ್ಶಕರನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ಅವರಿಗೆ ನನ್ನ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ. ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಕೋರುತ್ತಾ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪೋಸ್ಟ್‌ ಹಂಚಿಕೊಂಡಿದ್ದಾರೆ.

Share This Article