ಕುದುರೆ ಕೊಟ್ರೆ ಸಾಲದು ಒಬ್ಬ ಸಾರಥಿ ಬೇಕು: ಹೆಬ್ಬಾಳ್ಕರ್‌ಗೆ ಶಶಿಕಲಾ ಜೊಲ್ಲೆ ಟಾಂಗ್

Public TV
2 Min Read

ಬೆಳಗಾವಿ: ಬಿಜೆಪಿಯಿಂದ ಉಪಚುನಾವಣಾ ಕಣಕ್ಕೆ ಇಳಿದಿರುವ ಅನರ್ಹರ ವಿರುದ್ಧ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ತಿರುಗೇಟು ಕೊಟ್ಟಿದ್ದಾರೆ. ಕುದುರೆ ಕೊಟ್ಟರೆ ಸಾಲದು ಒಬ್ಬ ಸಾರಥಿ ಬೇಕು ಎಂದು ಟಾಂಗ್ ಕೊಟ್ಟಿದ್ದಾರೆ.

ಗೋಕಾಕ್‍ನಲ್ಲಿ ಮಾತನಾಡಿದ ಶಶಿಕಲಾ ಜೊಲ್ಲೆ ಅವರು, ಅನರ್ಹರನ್ನು ಸೋಲಿಸಿ ಜಿಲ್ಲಾ ರಾಜಕೀಯ ಬದಲು ಮಾಡಬೇಕಿದೆ ಎಂಬ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ತಿರುಗೇಟು ನೀಡಿದರು. ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಮಾತನಾಡಬಹುದು. ಅವರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ಕೊಡಲ್ಲ. ನಮ್ಮ ಎಲ್ಲಾ 15 ಅಭ್ಯರ್ಥಿಗಳು ಚುನಾವಣೆ ಗೆಲ್ಲಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ:ಲಕ್ಷ್ಮೀ ಹೆಬ್ಬಾಳ್ಕರ್ ನಮ್ಮ ಸಹೋದರಿ, ಪಕ್ಷಕ್ಕೆ ಬಂದರೆ ಸ್ವಾಗತ: ಲಕ್ಷ್ಮಣ್ ಸವದಿ

ಕೊಟ್ಟ ಕುದುರೆ ಏರದವರು ಧೀರ, ಶೂರರಲ್ಲ ಎಂಬ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕುದುರೆ ಕೊಟ್ಟರೆ ಸಾಲದು ಒಬ್ಬ ಸಾರಥಿ ಬೇಕು. ಕೇವಲ ಸಚಿವರನ್ನಾಗಿ ಮಾಡಿ ಅವರಿಗೆ ಯಾವುದೇ ಅಭಿವೃದ್ಧಿ ಹಣ ಬಿಡುಗಡೆ ಮಾಡಲಿಲ್ಲ. ಇದರಿಂದ ನೊಂದು 17 ಜನ ಶಾಸಕರು ಪಕ್ಷದಿಂದ ಹೊರ ಬಂದಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ:ಬೆಳಗಾವಿ ರಾಜಕೀಯ ಬದಲಿಸ್ತೀನಿ- ಲಕ್ಷ್ಮೀ ಹೆಬ್ಬಾಳ್ಕರ್

ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?
ಶನಿವಾರ ರಾತ್ರಿ ಅಥಣಿ ಕ್ಷೇತ್ರದ ಕಕಮರಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಡೆದ ಪ್ರಚಾರದಲ್ಲಿ ಭಾಗವಹಿಸಿ ಲಕ್ಷ್ಮಿ ಹೆಬ್ಬಾಳ್ಕರ್, ನಾನು ಬೆಳಗಾವಿ ರಾಜಕಾರಣ ಬದಲು ಮಾಡಬಲ್ಲೆ. ಕೊಟ್ಟ ಕುದುರೆ ಏರಲು ಆಗದವನು ಇನ್ನೊಂದು ಕುದುರೆ ಏರುತ್ತೇನೆ ಅನ್ನೋನು ವೀರನೂ ಅಲ್ಲ ಶೂರನೂ ಅಲ್ಲ ಎಂದು ಅನರ್ಹರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಹೇಶ್ ಕುಮಟಳ್ಳಿ ಮಳ್ಳ ಮಳ್ಳ ಮಂಚಕ್ಕೆ ಎಷ್ಟು ಕಾಲು ಅಂದ್ರೆ ಮೂರು ಮತ್ತೊಂದು ಅನ್ನೋವಂತಹ ಮಳ್ಳ. 2013 ಮತ್ತು 2018ರ ಚುನಾವಣೆಗೆ ಟಿಕೆಟ್ ಕೊಡಿಸಲು ನಾನೂ ಸಹಾಯ ಮಾಡಿದ್ದೆ. ಒಳ್ಳೆಯವರು, ಸುಸಂಸ್ಕೃತರು ಇದ್ದಾರೆ ಅಂದುಕೊಂಡಿದ್ದೆವು. ಆದರೆ ಅವರು ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದ್ದರು.

ಪಕ್ಷವೆನ್ನುವ ಹೆತ್ತ ತಾಯಿಗೆ ದ್ರೋಹ ಮಾಡಿದ್ದಾರೆ. ಇವತ್ತು ಹಾಲು ಕುಡಿದ ಮಕ್ಕಳು ಬದುಕುತ್ತಿಲ್ಲ ಇನ್ನು ಇವರು ವಿಷ ಕುಡಿದವರು ಇವರು ಬದುಕುತ್ತಾರಾ? ಜನ್ಮಕೊಟ್ಟ ತಾಯಿ ಒಬ್ಬರಿದ್ರೆ ಜಗತ್ತನ್ನು ತೋರಿಸಿದ ತಾಯಿ ನಮ್ಮ ಪಕ್ಷ. ಅಂತಹ ಪಕ್ಷಕ್ಕೆ ದ್ರೋಹ ಮಾಡಿ ಹೋಗಿದ್ದಾರೆ. ಅನುದಾನ ಕೊಡದಿದ್ದಕ್ಕೆ ಇವರೆಲ್ಲ ಪಕ್ಷ ಬಿಟ್ಟು ಹೋಗಿದ್ದಾರಂತೆ. ಲಕ್ಷ್ಮಿ ಹೆಬ್ಬಾಳ್ಕರ್ ಗೆ ಕೊಟ್ಟಷ್ಟು ಅನುದಾನ ನಮಗೆ ಕೊಡಲಿಲ್ಲ ಅಂತಾರೆ. ಅನುದಾನ ಕೇಳೋಕೆ ಆಗದೇ ಇವರೇನು ಬಾಯಲ್ಲಿ ಕಡಬು ಇಟ್ಟುಕೊಂಡಿದ್ದರಾ? ಮಂತ್ರಿಗಳ ಕಾಲು, ಕೈ ಹಿಡಿದು ಕೇಳಿ ಅನುದಾನ ಪಡೆಯಬಹುದಿತ್ತು ಎಂದು ವಾಗ್ದಾಳಿ ನಡೆಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *