ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ?: ಅಗ್ನಿಪಥ್ ಯೋಜನೆಗೆ ಸಿದ್ದು ವಿರೋಧ

By
3 Min Read

ಬೆಂಗಳೂರು: ಅಗ್ನಿಪಥ್ ಯೋಜನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ಟ್ವೀಟ್‌ನಲ್ಲಿ ಏನಿದೆ?: ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತ ಅಜೆಂಡಾ ಏನಾದರೂ ಇದೆಯೇ?

ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ, ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸಿದ್ದಾರೆ: ರಾಹುಲ್ ಗಾಂಧಿ

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧ- ಮತ್ತೇ ಪ್ಯಾಸೆಂಜರ್ ರೈಲಿನ 2 ಬೋಗಿಗೆ ಬೆಂಕಿ

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟು ಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?

ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲವಾಗಿದೆ.

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Live Tv

Share This Article
Leave a Comment

Leave a Reply

Your email address will not be published. Required fields are marked *