14 ಅತೃಪ್ತ ಶಾಸಕರನ್ನು ಅನರ್ಹ – ಸ್ಪೀಕರ್ ರಮೇಶ್ ಕುಮಾರ್ ಆದೇಶ

Public TV
1 Min Read

ಬೆಂಗಳೂರು: ಸೋಮವಾರ ನೂತನ ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವ ಮುನ್ನ ದಿನವೇ 14 ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ.

ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಎಲ್ಲ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ನೀಡಿದರು.

ಜುಲೈ 23ರಂದು ಮೈತ್ರಿ ಸರ್ಕಾರದ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುವಲ್ಲಿ ವಿಫಲವಾಗಿದ್ದರಿಂದ ರಾಜೀನಾಮೆ ನೀಡಿದ್ದರು. ಅಂತೆಯೇ ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಜುಲೈ 26ರಂದು ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಿಎಂ ಆದಮೇಲೆ ಯಡಿಯೂರಪ್ಪನವರು ಸೋಮವಾರ ಬಹುಮತ ಸಾಬೀತಿಗೆ ಅವಕಾಶ ಕೇಳಿದ್ದಾರೆ. ಇದೇ ವೇಳೆ ಹಣಕಾಸಿನ ಮಸೂದೆಯ ಅಂಗೀಕಾರದ ಮತದಾನಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ವಿಧಾನಸಭೆಯ ಅಧಿವೇಶನಕ್ಕೆ ಎಲ್ಲ ಸದಸ್ಯರು ಭಾಗವಹಿಸಬೇಕೆಂದು ಕಚೇರಿಯಿಂದ ಸೂಚನಾ ಪತ್ರ ಕಳುಹಿಸಲಾಗಿದೆ. ಇದೇ ವೇಳೆ ಮಾಜಿ ಕೇಂದ್ರ ಸಚಿವ ಜೈಪಾಲ ರೆಡ್ಡಿ ಅವರ ನಿಧನಕ್ಕೆ ಕಂಬನಿ ಮಿಡಿದರು.

ಸೋಮವಾರ ಅಧಿವೇಶನ ನಡೆಸಲು ಸಿದ್ಧ ನಡೆಸುವಂತೆ ಕಚೇರಿಯ ಕಾರ್ಯದರ್ಶಿಗಳಿಗೂ ಸೂಚನೆ ನೀಡಿದ್ದೇನೆ. ಬಹುಮತ ಸಾಬೀತಿಗೆ ಸೋಮವಾರ ಕರೆದ ಹಿನ್ನೆಲೆಯಲ್ಲಿ ಉಳಿದ ಎಲ್ಲ ರಾಜೀನಾಮೆ ಮತ್ತು ಅನರ್ಹತೆ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕಿದೆ. ಹಾಗಾಗಿ ನಮ್ಮ ಕಚೇರಿಯ ಅಧಿಕಾರಿಗಳು ಶನಿವಾರ ಮತ್ತು ಭಾನುವಾರ ಕೂಡ ಕೆಲಸ ಮಾಡಿದ್ದಾರೆ. ಸೋಮವಾರ ಸದನದಲ್ಲಿ ನಾವು ತೊಡಗಿಕೊಳ್ಳುವದರಿಂದ ಇಂದೇ ಎಲ್ಲ ಅತೃಪ್ತ ರಾಜೀನಾಮೆ ಅರ್ಜಿಗಳ ಇತ್ಯರ್ಥ ಮಾಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ಸಿನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಮಸ್ಕಿಯ ಪ್ರತಾಪ್ ಗೌಡ ಪಾಟೀಲ್, ರಾಣೆಬೆನ್ನೂರು ಶಾಸಕ ಆರ್ ಶಂಕರ್ ಅವರನ್ನು ರಮೇಶ್ ಕುಮಾರ್ ಜುಲೈ 25 ರಂದು ಸುದ್ದಿಗೋಷ್ಠಿ ಕರೆದು ಅನರ್ಹ ಗೊಳಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *