SSLC ಪರೀಕ್ಷೆಗೆ ಅಚ್ಚುಕಟ್ಟಿನ ಸಿದ್ಧತೆ ಮಾಡಿಕೊಳ್ಳಿ- ಅಧಿಕಾರಿಗಳಿಗೆ ಕೋಟ ಸೂಚನೆ

Public TV
3 Min Read

ಮಂಗಳೂರು: ಜುಲೈ 19 ಹಾಗೂ 22 ರಂದು ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಯಾವುದೇ ತೊಂದರೆ ಎದುರಾಗದಂತೆ ಅಚ್ಚುಕಟ್ಟಾಗಿ ಸಿದ್ಧತೆಗಳನ್ನು ಮಾಡಿಕೊಂಡು, ಪರೀಕ್ಷಾ ಕಾರ್ಯಗಳನ್ನು ಚೆನ್ನಾಗಿ ನಿರ್ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪೂರ್ವಭಾವಿ ಸಿದ್ಧತೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ, ಬಳಿಕ ಮಾತನಾಡಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಾವುದೇ ವಿದ್ಯಾರ್ಥಿಯ ಜೀವನದ ಪ್ರಮುಖ ಘಟ್ಟ, ಇಂತಹ ಪ್ರಮುಖ ಪರೀಕ್ಷೆಯಲ್ಲಿ ಯಾವುದೇ ರೀತಿಯ ಸಣ್ಣಪುಟ್ಟ ತಪ್ಪುಗಳಿಗೂ ಅವಕಾಶ ಇರಬಾರದು. ಹೀಗಾಗಿ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕು ಎಂದರು.

ಕಳೆದ ಬಾರಿಯ ಪರೀಕ್ಷೆಯಲ್ಲಿ ಒಂದು ಕೊಠಡಿಯಲ್ಲಿ ಹದಿನೆಂಟು ವಿದ್ಯಾರ್ಥಿಗಳಿಗೆ ಅವಕಾಶವಿತ್ತು, ಈ ಬಾರಿ 12 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಲಾಗಿದೆ, ಇದು ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮತ್ತಷ್ಟು ಅನುಕೂಲವಾಗಿದೆ. ಕೇರಳದ ಗಡಿಭಾಗದಿಂದ ಈ ಪರೀಕ್ಷೆ ಬರೆಯಲು 441 ವಿದ್ಯಾರ್ಥಿಗಳು ಬರುತ್ತಿದ್ದಾರೆ, ಅವರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು. ಸಾರಿಗೆ ಇಲಾಖೆಯಿಂದ ಪರೀಕ್ಷಾರ್ಥಿಗಳ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಬೇಕು, ಪಾಸಿಟಿವ್ ಲಕ್ಷಣವುಳ್ಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವ್ಯವಸ್ಥೆ ಆಗಬೇಕು. ಅಗತ್ಯ ಪೀಠೋಪಕರಣ ವ್ಯವಸ್ಥೆ ಮಾಡಿ ಪರೀಕ್ಷೆಗೆ ನೆರವಾಗಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಮಾತನಾಡಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ನಿಯೋಜಿಸಿರುವ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ವ್ಯಾಕ್ಸಿನ್ ಪಡೆದಿರಬೇಕು. ಪಡೆಯದವರನ್ನು ಆದ್ಯತೆ ಮೇರೆಗೆ ಲಸಿಕೆ ಕೊಡಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳನ್ನು ಅವರಿರುವ ಸ್ಥಳಗಳಿಂದ ಕರೆತರಲು ಸಾರಿಗೆ ವ್ಯವಸ್ಥೆ ರೂಪಿಸಿಕೊಳ್ಳಬೇಕು. ಖಾಸಗಿ ಬಸ್‍ಗಳು ಅಂದು ಕ್ಯಾನ್ಸಲ್ ಆಗದಂತೆ ನೋಡಿಕೊಳ್ಳಬೇಕು. ಕೇರಳದಿಂದ 441 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬರಲಿದ್ದು, ಅವರನ್ನು ಕರೆತರಲಿರುವ ಪೋಷಕರು ಕಡ್ಡಾಯವಾಗಿ ಆರ್‍ಟಿಪಿಸಿಆರ್ ನೆಗೆಟಿವ್ ವರದಿ ತರಬೇಕು. ಕೋವಿಡ್ ಪಾಸಿಟಿವ್ ಕಂಡುಬಂದ ವಿದ್ಯಾರ್ಥಿಗಳನ್ನು ಅಂಬುಲೆನ್ಸ್ ನಲ್ಲಿ ಕರೆತರಬೇಕು. ಈ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆಗೆ ಅವಕಾಶ ಮಾಡಿಕೊಡಬೇಕು. ಅಲ್ಲಿ ಮೇಜು, ಕುರ್ಚಿ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪಿಪಿಇ ಕಿಟ್ ಹಾಕಿಕೊಂಡು ಅವರಿಗೆ ಪ್ರಶ್ನೆ ಪತ್ರಿಕೆ ನೀಡಬೇಕು ಎಂದರು.

ಈ ಬಾರಿ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಲಾಗುತ್ತಿದ್ದು, ಒಎಮ್‍ಆರ್ ಶೀಟ್ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಹಾಗೂ ಹೆದರಿಕೆ ಬಾರದಂತೆ ಜಾಗೃತಿ ಮೂಡಿಸಬೇಕು. ಪರೀಕ್ಷೆಗಳ ನಡುವೆ ಎರಡು ದಿನಗಳ ಅಂತರವಿದ್ದು, ಈ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ ಪರೀಕ್ಷಾ ಕೊಠಡಿಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಬೇಕು. ಪ್ರಮುಖವಾಗಿ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಎಚ್ಚರ ವಹಿಸಬೇಕು ಹಾಗೂ ಪೊಲೀಸರು ಬಿಗಿ ಭದ್ರತೆ ಒದಗಿಸಬೇಕು. ಈ ಬಾರಿ ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆಗಳ ಮುಂಚಿತವಾಗಿ ಆಗಮಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲಯ್ಯಸ್ವಾಮಿ ಮಾತನಾಡಿ, ಈ ಬಾರಿ 179 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದ್ದು, 2 ದಿನಗಳ ಕಾಲ ಪರೀಕ್ಷೆ ನಡೆಯಲಿದೆ. ಕಳೆದ ಬಾರಿ ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿತ್ತು, ಈ ಬಾರಿ 12 ಮಕ್ಕಳಿಗೆ ಒಂದು ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಕೋವಿಡ್ ಲಕ್ಷಣಗಳು ಬಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಎರಡು ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಒಟ್ಟು 3,708 ಸಿಬ್ಬಂದಿಗಳು ಸಜ್ಜಾಗಿದ್ದಾರೆ, 2,718 ಕೊಠಡಿಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಮಾತನಾಡಿ, ಪರೀಕ್ಷೆಗೆ ಬಿಗಿ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಹಾಗೂ ಶಾಸಕ ವೇದವ್ಯಾಸ ಕಾಮತ್ ವೇದಿಕೆಯಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *