– ಈ ಬಾರಿ 70 ಮಂದಿ ಅರ್ಹ ಸಾಧಕರಿಗೆ ಪ್ರಶಸ್ತಿ ನೀಡಲು ನಿರ್ಧಾರ
– ಕಳೆದ ವರ್ಷ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿತ್ತು
ಬೆಂಗಳೂರು: ವರ್ಷದಿಂದ ವರ್ಷಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ (Kannada Rajyotsava Award) ಡಿಮ್ಯಾಂಡ್ ಹೆಚ್ಚಾಗುತ್ತಿದ್ದು, ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಹೆಚ್ಚಾಗ್ತಿದೆ. ಹೀಗಾಗಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ಪ್ರಕ್ರಿಯೆಯನ್ನೇ ಕೈಬಿಟ್ಟಿದೆ
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಆನ್‌ಲೈನ್ ಮೂಲಕ ಅರ್ಜಿ (Online Application) ಆಹ್ವಾನಿಸುವ ಪ್ರಕ್ರಿಯೆಯನ್ನೇ ಕೈಬಿಟ್ಟಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿ ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಸಮಿತಿಯಿಂದ ಆಯ್ಕೆಯಾದ ಸಾಧಕರಿಗೆ ಮಾತ್ರ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ.
ಇನ್ನೂ ಈ ಬಾರಿ 70 ಜನ ಅರ್ಹ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರದ ನಿರ್ಧಾರ ಮಾಡಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲು ನಿರ್ಧರಿಸಲಾಗಿದೆ.
ಕಳೆದ ವರ್ಷ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ
ಕಳೆದ ವರ್ಷ 69 ಪ್ರಶಸ್ತಿಗಳಿಗೆ 2,000 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿತ್ತು. ಇದರಲ್ಲಿ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕವೇ ಬರೋಬ್ಬರಿ 1,135ಕ್ಕೂ ಹೆಚ್ಚು ಹಾಗೂ ಭೌತಿಕವಾಗಿ 85ಕ್ಕೂ ಹೆಚ್ಚು ಅರ್ಜಿಗಳು ಸಂದಾಯವಾಗಿತ್ತು.
ಬಿಜೆಪಿ ಅವಧಿಯಲ್ಲೇ ಈ ಕ್ರಮ ಇತ್ತು
2022ರಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿತ್ತು. ಅಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಸುನಿಲ್ ಕುಮಾರ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಘೋಷಿಸಿದ್ದರು. ಆದ್ರೆ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ಪ್ರಕ್ರಿಯೆಗೆ ಬ್ರೇಕ್ ಬಿದ್ದಿತ್ತು.