ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ಸಾರವಾಡ ಗ್ರಾಮದ ಬಳಿ ನಡೆದಿದೆ.
ಮೂಲತಃ ಹೈದರಾಬಾದ್ ನಿವಾಸಿಗಳಾದ ಬೇಗಂ ತೆಗ್ಗೆಳ್ಳಿ (28) ಹಾಗೂ ಮಹಾನಂದಾ ಹಡಪದ (30) ಮೃತ ದುರ್ದೈವಿಗಳು. ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟ್ರ್ಯಾಕ್ಟರ್‍ನಲ್ಲಿದ್ದ ಎಲ್ಲರೂ ಮಹಾರಾಷ್ಟ್ರ ರಾಜ್ಯದ ಸೋಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಹೈದ್ರಾ ನಿವಾಸಿಗಳು ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದಿಂದ ಕಬ್ಬು ಕಟಾವು ಕೆಲಸಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣಕ್ಕೆ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸುಮಾರು ಬೆಳಗ್ಗೆ 6 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಅಪಘಾತ ನಡೆದ ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.