ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Board) ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ (CBI) ತನಿಖೆಗೆ ವಹಿಸಿ ಹೈಕೋರ್ಟ್ (High Court) ಮಹತ್ವದ ಆದೇಶ ಪ್ರಕಟಿಸಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸಿದೆ. ಅಷ್ಟೇ ಅಲ್ಲದೇ ಎಸ್ಐಟಿ ಸಂಗ್ರಹಿಸಿದ ಎಲ್ಲಾ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಆದೇಶಿಸಿದೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank Of India) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ 2024ರ ಸೆಪ್ಟೆಂಬರ್ 30ರಂದು ಮುಕ್ತಾಯಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಬೆಂಗಳೂರು ಪೂರ್ವ ವಲಯದ ಯೂನಿಯನ್ ಬ್ಯಾಂಕ್ ಡಿಜಿಎಂ ಜೆ. ಮಹೇಶ್ ಎಂಬುವವರು ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳ ಪತ್ರದ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲು ಮಾಡಿ ಈಗಾಗಲೇ ತನಿಖೆ ಆರಂಭಿಸಿದೆ. ಇದನ್ನೂ ಓದಿ: ಹೆಚ್ಚುತ್ತಿರುವ ಹೃದಯಾಘಾತ – ಮೈಸೂರಿನ ಜಯದೇವ ಆಸ್ಪತ್ರೆಗೆ ತಪಾಸಣೆಗೆ ಬರುವವರ ಸಂಖ್ಯೆ ದಿಢೀರ್ ಏರಿಕೆ
ಏನಿದು ಪ್ರಕರಣ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ (Chandrashekaran) ಇತ್ತೀಚೆಗೆ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂದಿಸಿದಂತೆ ಜಾರಿ ನಿರ್ದೇಶನಾಲಯ ಸಹ ತನಿಖೆ ನಡೆಸುತ್ತಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ನಾಗೇಂದ್ರ ನಿಗಮದ ಅಧ್ಯಕ್ಷರಾದ, ಶಾಸಕ ಬಸನಗೌಡ ದದ್ದಲ್ ಅವರು ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಮಾಡಿರುವ ಬಗ್ಗೆ ಆರೋಪ ಬಂದಿದೆ. ಈ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಎಸ್ಐಟಿ ನಾಗೇಂದ್ರ ಮತ್ತು ದದ್ದಲ್ ಅವರಿಗೆ ಕ್ಲಿನ್ ಚಿಟ್ ನೀಡಿತ್ತು.