ಜಿಲ್ಲೆಯನ್ನು ಅಭಿವೃದ್ಧಿಗೊಳಿಸಲು 120 ಕಿ.ಮೀ ವೇಗದಲ್ಲಿ ಕೆಲಸ ಮಾಡಿ: ಶಶಿಕಲಾ ಜೊಲ್ಲೆ

Public TV
3 Min Read

– ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟಕ್ಕೂ ತಲುಪಿಸಲು ವ್ಯಾಪಕ ಪ್ರಚಾರ ಕೈಗೊಳ್ಳಿ
– ಮೈಗಳ್ಳತನ ಬಿಟ್ಟು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ
– ತಾಲ್ಲೂಕು ಮಟ್ಟದಲ್ಲೂ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ: ನೂತನ ಜಿಲ್ಲೆ ವಿಜಯನಗರವನ್ನು ಸಮಗ್ರ ಅಭಿವೃದ್ಧಿಗೊಳಿಸಲು 120 ಕಿ.ಮೀ ವೇಗದಲ್ಲಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ಮಾನ್ಯ ಮುಜರಾಯಿ, ಹಜ್, ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಗುರುವಾರ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ನಡೆದ ಮೊದಲ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಶಶಿಕಲಾ ಜೊಲ್ಲೆ ಮಾತನಾಡಿದರು. ನೂತನ ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮವಾಗಿ ಸ್ಪಂದಿಸುವ ಅಗತ್ಯವಿದೆ. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಸಲಹೆ ಹಾಗೂ ಸಹಕಾರವನ್ನು ಜಿಲ್ಲೆಯ ಜನಪ್ರತಿನಿಧಿಗಳು, ಸಚಿವ ಆನಂದ್ ಸಿಂಗ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡುತ್ತಿದ್ದಾರೆ. ಆದರೆ ಜಿಲ್ಲೆಯ ಅಧಿಕಾರಿಗಳ ಸಹಕಾರ ಹಾಗೂ ಒತ್ತಾಸೆ ಇಲ್ಲದೆ ಹೆಚ್ಚಿನದ್ದನ್ನು ಸಾಧಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಇಬ್ಬರು ಸಹಕಾರದಿಂದ ಅಭಿವೃದ್ಧಿಗೆ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಹೇಳಿದರು.

ಸಭೆಯಲ್ಲಿ ಎಲ್ಲಾ ಇಲಾಖೆಗಳ ಮಾಹಿತಿಯನ್ನು ಸಚಿವರು ಪಡೆದುಕೊಂಡರು. ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 20ರಷ್ಟು ಹೆಚ್ಚಿನ ಮಳೆ ಆಗಿರುವುದು ಸಂತಸದ ವಿಷಯ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವತಿಯಿಂದ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಹಲವಾರು ಯೋಜನೆಗಳು ಇವೆ. ಇವುಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ ರೈತರಿಗೆ ಅನುಕೂಲ ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಡಿತರ ಚೀಟಿ ಹೊಂದಿರುವ ಸರ್ಕಾರಿ ನೌಕರರ ವಿರುದ್ಧ ಕೂಡಲೇ ನಿಯಮಾವಳಿಗಳ ಪ್ರಕಾರ ಶಿಸ್ತಿನ ಕ್ರಮ ಕೈಗೊಳ್ಳಬೇಕು. ಅವರಿಂದ ಸಂಗ್ರಹಿಸಬೇಕಾದ ದಂಡವನ್ನು ಕಟ್ಟುನಿಟ್ಟಾಗಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಒಲಿಂಪಿಕ್ಸ್ ಮುಗಿಯುವವರೆಗೆ ಯುದ್ಧವನ್ನು ಮುಂದೆ ಹಾಕಿ ಎಂದಿದ್ದ ಚೀನಾ!

ಸಚಿವರಿಂದ ತರಾಟೆ:
ಜಿಲ್ಲೆಯಲ್ಲಿ ವಿವಿಧ ನಿರ್ಮಾಣದ ಹಂತದಲ್ಲಿರುವ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕಟ್ಟಡಗಳ ಬಗ್ಗೆ ಸಭೆಗೆ ಸರಿಯಾದ ಮಾಹಿತಿಯನ್ನು ನೀಡಲು ವಿಫಲರಾದ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪೂರ್ಣ ಮಾಹಿತಿ ನೀಡುವುದು ಸರಿಯಲ್ಲ. ಅಧಿಕಾರಿಗಳು ಮುಂದಿನ ಸಭೆಯಲ್ಲಿ ಸಂಪೂರ್ಣ ಮಾಹಿತಿಯನ್ನು ತರಬೇಕು. ಇಲ್ಲದಿದ್ದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಇರುವುದು ನಮ್ಮ ಗಮನಕ್ಕೆ ಬಂದಿದೆ. ಶಿಕ್ಷಕರ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ ನಾಳೆ ಶಿಕ್ಷಣ ಸಚಿವರೊಂದಿಗೆ ಚರ್ಚಿಸುತ್ತೇನೆ. ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಕೊರತೆ ನಿವಾರಿಸಲು ಡಿಡಿಪಿಐಗೆ ಸೂಚನೆ ನೀಡಿದರು.

ತಾಲೂಕು ಸಭೆ:
ವಿಧಾನ ಮಂಡಲದ ಬಜೆಟ್ ಅಧಿವೇಶನದ ನಂತರ ಮತ್ತೊಮ್ಮೆ ಜಿಲ್ಲಾಮಟ್ಟದ ಸಭೆಯನ್ನು ನಡೆಸಲಾಗುವುದು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಅಂಶಗಳನ್ನು ತಿಳಿದುಕೊಳ್ಳಲು ತಾಲೂಕು ಮಟ್ಟದಲ್ಲೂ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು. ಇದರಿಂದ ಆಯಾ ತಾಲೂಕಿನ ಸಮಸ್ಯೆಗಳು ಸಮರ್ಪಕವಾಗಿ ತಿಳಿದು ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.

ಜಿಲ್ಲೆಯಲ್ಲಿ ನೂತನ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಾನು ಈಗಾಗಲೇ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ವಿವರವಾಗಿ ಚರ್ಚಿಸಿದ್ದೇನೆ. ಕಾನೂನಾತ್ಮಕ ತೊಡಕುಗಳನ್ನು ಶೀಘ್ರದಲ್ಲೇ ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯುದ್ಧ ಪರಿಸ್ಥಿತಿ ತಿಳಿಯಾದ್ರೆ ಮತ್ತೆ ಉಕ್ರೇನ್ ಹೋಗುತ್ತೇನೆ: ವೈದ್ಯಕೀಯ ವಿದ್ಯಾರ್ಥಿ

ಜಿಲ್ಲೆಯ ನಾಲ್ಕು ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿರುವ ಮಾಹಿತಿ ಸಿಕ್ಕ ತಕ್ಷಣ ನಮ್ಮ ಜಿಲ್ಲಾಡಳಿತ ತ್ವರಿತವಾಗಿ ಕಾರ್ಯಪ್ರವೃತ್ತರಾಗಿ ಆ ವಿದ್ಯಾರ್ಥಿಗಳನ್ನು ಸಂಪರ್ಕಿಸಿ, ಸುರಕ್ಷಿತ ಸ್ಥಳ ತಲುಪಲು ನೆರವಾಗುವಂತೆ ಉತ್ತಮ ಸಮನ್ವಯ ಕಾರ್ಯನಿರ್ವಹಿಸಿದೆ. ಅದಕ್ಕಾಗಿ ಜಿಲ್ಲಾಡಳಿತಕ್ಕೆ ನಾನು ಅಭಿನಂದನೆ ಸಲ್ಲಿಸಿದ್ದೇನೆ. ವಿಕಾಸ್, ಸಂಜಯ್ ಹಾಗೂ ನಂದಿನಿ ಸುರಕ್ಷಿತವಾಗಿ ಹಂಗೇರಿ ದೇಶವನ್ನು ಹಾಗೂ ಲಾವಣ್ಯ ರೊಮೇನಿಯಾ ದೇಶವನ್ನು ತಲುಪಿದ್ದಾರೆ. ಅಲ್ಲಿಂದ ಸದ್ಯದಲ್ಲೇ ರಾಜ್ಯಕ್ಕೆ ಬರಲಿದ್ದಾರೆ. ಈ ಬಗ್ಗೆ ಗಮನವಿರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು ಹೇಳಿದರು.

ಸಭೆಯಲ್ಲಿ ಸಂಸದ ದೇವೇಂದ್ರಪ್ಪ, ಶಾಸಕ ಕರುಣಾಕರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಸತೀಶ್, ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರ್ಷ ಗೋಯಲ್ ಸೇರಿದಂತೆ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *