ಮೊಬೈಲಿನಿಂದ ಹರಡುತ್ತೆ ಕೊರೊನಾ – ವೈದ್ಯಕೀಯ ಸಿಬ್ಬಂದಿಗೆ ಫೋನ್ ಬಳಕೆಗೆ ನಿಷೇಧ

Public TV
2 Min Read

– ಪಶ್ಚಿಮ ಬಂಗಾಳ ಸರ್ಕಾರದಿಂದ ಆದೇಶ

ಕೋಲ್ಕತ್ತಾ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯಗಳು ಅನೇಕ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿವೆ. ಈ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವೈದ್ಯಕೀಯ ಸಿಬ್ಬಂದಿ, ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿದೆ.

ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‍ಒ)ಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಕೊರೊನಾ ವೈರಸ್ ಮೊಬೈಲ್ ಫೋನ್‍ಗಳ ಮೂಲಕ ಹರಡುವ ಸಾಧ್ಯತೆ ಇದೆ. ಅಲ್ಲದೇ ಡಬ್ಲ್ಯುಎಚ್‍ಒ ಮಾರ್ಗಸೂಚಿಗಳ ಅನುಸಾರ ಕೊರೊನಾ ಹರಡುವಿಕೆಯನ್ನು ನಿಯಂತ್ರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲಾ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ರೋಗಿಗಳು ತಮ್ಮ ಮೊಬೈಲ್ ಫೋನ್‍ಗಳನ್ನು ಹೊರಗಡೆ ಇಟ್ಟು ಬರಬೇಕು. ನಂತರ ಆಸ್ಪತ್ರೆಯಿಂದ ಹೋಗುವಾಗ ಫೋನ್‍ಗಳನ್ನು ತೆಗೆದುಕೊಂಡು ಹೋಗಬಹುದು ಎಂದು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ರಾಜೀವ್ ಸಿನ್ಹಾ ಹೇಳಿದ್ದಾರೆ.

ದೇಶಾದ್ಯಂತ ವೈಯಕ್ತಿಕ ರಕ್ಷಣಾ ಸಾಧನಗಳ (ಪಿಪಿಇ) ಕೊರತೆ ಉಂಟಾಗಿದೆ. ಅಲ್ಲದೇ ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡುವ ಆರೋಗ್ಯ ಕಾರ್ಯಕರ್ತರಿಗೂ ಸಾಕಷ್ಟು ಸುರಕ್ಷತಾ ಕ್ರಮಗಳ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸೇರಿದಂತೆ ಎಂಟು ವೈದ್ಯಕೀಯ ಸಂಸ್ಥೆಗಳು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆಯಲಾಗಿದೆ. ಅದರಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಸುರಕ್ಷತೆ ಒದಗಿಸುವಂತೆ ಮನವಿ ಮಾಡಲಾಗಿದೆ.

“ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಅನುಮತಿಯೊಂದಿಗೆ ಅಧಿಕ ಕೊರೊನಾ ವೈರಸ್ ಪರೀಕ್ಷಾ ಕೇಂದ್ರಗಳನ್ನು ತೆರೆಯಬೇಕು. ಪ್ರತಿ ಪ್ರದೇಶದಲ್ಲಿ ಕನಿಷ್ಠ ಒಂದು ಕೇಂದ್ರವನ್ನು ತೆರೆಯಬೇಕು. ಅಲ್ಲದೇ ಐಸಿಎಂಆರ್ ಮಾರ್ಗಸೂಚಿಗಳ ಅನುಸಾರ ಪರೀಕ್ಷೆಯನ್ನು ಮಾಡಬೇಕು. ಪ್ರತಿ ಉಪವಿಭಾಗದ ಮಟ್ಟದಲ್ಲಾದರೂ ಮಾದರಿ ಸಂಗ್ರಹ ಕೇಂದ್ರ ಇರಬೇಕು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ 14 ವೈದ್ಯಕೀಯ ಕಾಲೇಜುಗಳು ಕೊರೊನಾ ವೈರಸ್ ಪರೀಕ್ಷೆ ನಡೆಸಲು ಪ್ರಾರಂಭಿಸಿವೆ. ಐಸಿಎಂಆರ್ ಕಮಾಂಡ್ ಆಸ್ಪತ್ರೆ, ಅಲಿಪೋರ್ ಹಾಗೂ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕೊರೊನಾ ವೈರಸ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಮೊದಲಿಗೆ ಹಾಟ್‍ಸ್ಟಾಟ್‍ಗಳಲ್ಲಿ ಶೀಘ್ರದಲ್ಲೇ ಕೊರೊನಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಇತರ ಪ್ರದೇಶಗಳಲ್ಲಿ ಕೊರೊನಾ ವೈರಸ್ ಪರೀಕ್ಷೆ ನಡೆಸಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *