ಪುತ್ತೂರಿಗೆ ಮೆಡಿಕಲ್ ಕಾಲೇಜು: ಬಜೆಟ್‌ನಲ್ಲಿ ವೈದ್ಯಕೀಯ, ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳೇನು?

Public TV
3 Min Read

ಬೆಂಗಳೂರು: ದಾಖಲೆಯ ಬಜೆಟ್ ಮಂಡಿಸಿದ 16 ನೇ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಶಿಕ್ಷಣ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಹಾಗೂ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಕ್ರಮವಹಿಸಲಾಗುವುದು. ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ 200 ಹಾಗೂ ಕೊಡಗಿಗೆ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪನೆ ಬಗ್ಗೆ ಘೋಷಿಸಿದ್ದಾರೆ.

ವೈದ್ಯಕ್ಷೀಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಏನೆಲ್ಲಾ ಸಿಕ್ಕಿವೆ?
ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಇದನ್ನೂ ಓದಿ: ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು

ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿಗೊಳಿಸಲಾಗುವುದು. ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕವನ್ನು ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ವಿವಿಧ ಕಾರ್ಯಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದನ್ನೂ ಓದಿ: ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: ಭೀಮಾನಾಯ್ಕ್

ಶಿಕ್ಷಣ ಕ್ಷೇತ್ರ:
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ, ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸಲಾಗುವುದು. ಇದನ್ನೂ ಓದಿ: ಸರ್ಕಾರಿ ಗುತ್ತಿಗೆ, ಖರೀದಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ – ಇದು ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ: ಸುನಿಲ್‌ ಕುಮಾರ್‌ ಕಿಡಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಇದನ್ನೂ ಓದಿ: ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ ಯೋಜನೆ – 5 ಲಕ್ಷ ರೂ. ನಗದು ರಹಿತ ಚಿಕಿತ್ಸೆ

ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು. ಕೆಕೆಆರ್‌ಡಿಬಿ ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

Share This Article