ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಯಾರು? ಅವರನ್ನೇ ಆಯ್ಕೆ ಮಾಡಿದ್ದು ಯಾಕೆ?

Public TV
3 Min Read

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಸಿಪಿ ರಾಧಾಕೃಷ್ಣನ್‌ (CP Radhakrishnan) ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ (NDA Candidate) ಆಯ್ಕೆ ಮಾಡಲಾಗಿದೆ.

ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ (Narendra Modi), ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ನೇತೃತ್ವತದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಧಾಕೃಷ್ಣನ್‌ ಹೆಸರನ್ನು ಅಂತಿಮಗೊಳಿಸಲಾಯಿತು. ಉಪರಾಷ್ಟ್ರಪತಿ ಹುದ್ದೆಗೆ ಹಲವು ಹೆಸರುಗಳು ಕೇಳಿ ಬಂದಿದ್ದರೂ ಅಂತಿಮವಾಗಿ ಸಿಪಿ ರಾಧಾಕೃಷ್ಣನ್‌ ಅವರನ್ನು ಆಯ್ಕೆ ಮಾಡಲಾಯಿತು.

ವಿಷಯಗಳ ಬಗ್ಗೆ ಜ್ಞಾನ, ಉತ್ತಮ ಸಂಸದೀಯ ಪಟು ಜೊತೆಗೆ ದಕ್ಷಿಣ ಭಾರತದ ಮೂಲದ ವ್ಯಕ್ತಿಯನ್ನು ಆಯ್ಕೆ ಮಾಡಲಾಗಿದೆ ಎಂಬ ಸಂದೇಶ ಕಳುಹಿಸಲು ಸಿಪಿ ರಾಧಾಕೃಷ್ಣನ್‌ ಅವರ ಹೆಸರನ್ನೇ ಬಿಜೆಪಿ ಅಂತಿಮಗೊಳಿಸಿದೆ.

ಈ ವೇಳೆ ಮಾತನಾಡಿದ ನಡ್ಡಾ, ಮುಂದಿನ ಉಪರಾಷ್ಟ್ರಪತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಬೇಕೆಂದು ನಾವು ಬಯಸುತ್ತೇವೆ. ನಾವು ವಿರೋಧ ಪಕ್ಷದ ನಾಯಕರನ್ನು ಸಂಪರ್ಕಿಸಿದ್ದೇವೆ ಎಂದು ತಿಳಿಸಿದರು.

ಸಿಪಿ ರಾಧಾಕೃಷ್ಣನ್‌ ಯಾರು?
* ತಮಿಳುನಾಡಿನಲ್ಲಿ ಜನಿಸಿದ ರಾಧಾಕೃಷ್ಣನ್, ಕಳೆದ ವರ್ಷ ಜುಲೈನಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: 7 ದಿನಗಳಲ್ಲಿ ಅಫಿಡವಿಟ್‌ ಸಲ್ಲಿಸಿ ಇಲ್ಲವೇ ದೇಶದ ಕ್ಷಮೆ ಕೇಳಿ: ರಾಹುಲ್‌ಗೆ ಚುನಾವಣಾ ಆಯೋಗ ಡೆಡ್‌ಲೈನ್‌

* 68 ವರ್ಷ ವಯಸ್ಸಿನ ಅವರು ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಮಾರ್ಚ್ ಮತ್ತು ಜುಲೈ 2024 ರ ನಡುವೆ ಅವರು ತೆಲಂಗಾಣ ರಾಜ್ಯಪಾಲರಾಗಿ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದರು.

* 2023 ರಲ್ಲಿ ಜಾರ್ಖಂಡ್ ರಾಜ್ಯಪಾಲರಾಗಿ ನೇಮಕಗೊಂಡ ಮೊದಲ ನಾಲ್ಕು ತಿಂಗಳೊಳಗೆ, ರಾಧಾಕೃಷ್ಣನ್ ಅವರು ರಾಜ್ಯದ ಎಲ್ಲಾ 24 ಜಿಲ್ಲೆಗಳಿಗೆ ಪ್ರಯಾಣಿಸಿ ನಾಗರಿಕರು ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದರು.

* ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಭಾರತೀಯ ಜನ ಸಂಘದೊಂದಿಗೆ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ ಇವರು 1998 ಮತ್ತು 1999 ರಲ್ಲಿ ಎರಡು ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

 

* ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದಾಗ(2004-2007) ಅವರು 93 ದಿನಗಳ ಕಾಲ 19 ಸಾವಿರ ಕಿಮೀ ‘ರಥ ಯಾತ್ರೆ’ಯನ್ನು ಕೈಗೊಂಡಿದ್ದರು. ಭಾರತದ ಎಲ್ಲಾ ನದಿಗಳ ಜೋಡಣೆ, ಭಯೋತ್ಪಾದನೆ ನಿರ್ಮೂಲನೆ, ಏಕರೂಪ ನಾಗರಿಕ ಸಂಹಿತೆ ಜಾರಿ, ಅಸ್ಪೃಶ್ಯತೆಯನ್ನು ಹೋಗಲಾಡಿಸುವುದು ಮತ್ತು ಮಾದಕ ದ್ರವ್ಯಗಳ ಪಿಡುಗನ್ನು ಎದುರಿಸುವುದು ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಯಾತ್ರೆಯನ್ನು ಆಯೋಜಿಸಲಾಗಿತ್ತು. ಅವರು ವಿಭಿನ್ನ ಕಾರಣಗಳಿಗಾಗಿ ಇನ್ನೂ ಎರಡು ಪಾದಯಾತ್ರೆಗಳನ್ನು ಕೈಗೊಂಡಿದ್ದರು.  ಇದನ್ನೂ ಓದಿ:  ರಿಸಲ್ಟ್‌ ಪ್ರಕಟವಾದ ಬಳಿಕ ದೂರು ದಾಖಲಿಸದೇ ಆರೋಪ ಮಾಡೋದು ಸಂವಿಧಾನಕ್ಕೆ ಮಾಡೋ ಅವಮಾನ: ಚುನಾವಣಾ ಆಯೋಗ

* ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ರಾಧಾಕೃಷ್ಣನ್ ಅವರು ತಮಿಳುನಾಡಿನ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಗೌರವಾನ್ವಿತ ಹೆಸರನ್ನು ಹೊಂದಿದ್ದಾರೆ.

*1957 ರಲ್ಲಿ ತಮಿಳುನಾಡಿನ ತಿರುಪ್ಪೂರಿನಲ್ಲಿ ಜನಿಸಿದ ಅವರು ಕೊಯಮತ್ತೂರಿನ ಚಿದಂಬರಂ ಕಾಲೇಜಿನಿಂದ ಬಿಬಿಎ ಪದವಿ ಪಡೆದಿದ್ದಾರೆ. ಒಬ್ಬ ಉತ್ಸಾಹಿ ಕ್ರೀಡಾಪಟುವಾಗಿರುವ ಇವರು ಟೇಬಲ್ ಟೆನ್ನಿಸ್‌ನಲ್ಲಿ ಕಾಲೇಜು ಚಾಂಪಿಯನ್ ಆಗಿದ್ದರು. ಅಷ್ಟೇ ಅಲ್ಲದೇ ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದರು.

* ಸಂಸದರಾಗಿದ್ದಾಗ ಅವರು ಜವಳಿ ಸ್ಥಾಯಿ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು ಮತ್ತು ಹಣಕಾಸು ಮತ್ತು ಸಾರ್ವಜನಿಕ ಉದ್ಯಮಗಳಿಗೆ ಸಂಬಂಧಿಸಿದ ಹಲವಾರು ಸಮಿತಿಗಳಿಗೆ ಕೊಡುಗೆ ನೀಡಿದ್ದಾರೆ.

* ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (2004) ಸಂಸದೀಯ ನಿಯೋಗದ ಭಾಗವಾಗಿದ್ದರು ಮತ್ತು ತೈವಾನ್‌ಗೆ ತೆರಳಿದ್ದ ಮೊದಲ ಭಾರತೀಯ ನಿಯೋಗದ ಭಾಗವಾಗಿದ್ದರು. ಇದನ್ನೂ ಓದಿಬಿಹಾರದಲ್ಲಿ ಮತದಾರರ ಹಕ್ಕುಗಳ ಯಾತ್ರೆಗೆ ಚಾಲನೆ  ಬಿಜೆಪಿ, ಚು. ಆಯೋಗ ವಿರುದ್ಧ ರಾಗಾ ವಾಗ್ದಾಳಿ

* ರಾಧಾಕೃಷ್ಣನ್ ಸಾರ್ವಜನಿಕ ಆಡಳಿತದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ತೆಂಗಿನ ನಾರು ಮಂಡಳಿಯ ಅಧ್ಯಕ್ಷರಾಗಿದ್ದಾಗ (2016–2020) ಬೋರ್ಡ್‌ ದಾಖಲೆಯ 2,532 ಕೋಟಿ ರೂ. ಮೌಲ್ಯದ ವಸ್ತುಗಳನ್ನು ರಫ್ತು ಮಾಡಿತ್ತು. ಕೇರಳದ ಬಿಜೆಪಿಯ ಅಖಿಲ ಭಾರತ ಉಸ್ತುವಾರಿಯಾಗಿ (2020–2022) ಕೆಲಸ ಮಾಡಿದ್ದಾರೆ.

* ರಾಜಕೀಯ ಮತ್ತು ಆಡಳಿತದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ಸಿ.ಪಿ. ರಾಧಾಕೃಷ್ಣನ್ ಅವರನ್ನು ತಮಿಳುನಾಡಿನ ರಾಜಕೀಯ ಮತ್ತು ಬಿಜೆಪಿಯ ಸಂಘಟನೆಯ ಅನುಭವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

Share This Article