ನನಗೆ ಜೀರೋ ಟ್ರಾಫಿಕ್‌ ಸೌಲಭ್ಯ ಬೇಡ; ಸಾರ್ವಜನಿಕರಿಗೆ ತೊಂದರೆಯಾಗುತ್ತೆ ಅಂತ ಈ ನಿರ್ಧಾರ: ಸಿಎಂ

Public TV
1 Min Read

ಬೆಂಗಳೂರು: ತಮ್ಮ ವಾಹನ ಸಂಚಾರಕ್ಕೆ ನೀಡಿರುವ ಜೀರೋ ಟ್ರಾಫಿಕ್‌ ಸೌಲಭ್ಯವನ್ನು ಹಿಂದಕ್ಕೆ ಪಡೆಯಿರಿ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಯಲ್ಲೆಲ್ಲ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮನೆ, ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಮುಚ್ಚಿಕೊಳ್ಳುವಷ್ಟು ಮಟ್ಟಕ್ಕೆ ಮಳೆ ನೀರು ಹರಿಯುತ್ತಿದೆ.

ಮಳೆಯಿಂದ ಅವಾಂತರ ಸೃಷ್ಟಿಯಾಗಿರುವ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಳೆಯಿಂದ ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದೆ. ಈ ನಡುವೆಯೇ ಮಳೆ ಅನಾಹುತ ಪರಿಶೀಲನೆಗಾಗಿ ಸಿಟಿ ರೌಂಡ್ಸ್‌ ಹಾಕಲು ಸಿಎಂ ಮುಂದಾಗಿದ್ದರು. ಸಿಎಂ ಸಂಚಾರದಿಂದ ಮತ್ತಷ್ಟು ಟ್ರಾಫಿಕ್‌ ಸಮಸ್ಯೆ ಹೆಚ್ಚಾಗಿದ್ದರಿಂದ ಸಿಟಿ ರೌಂಡ್ಸ್‌ ಮೊಟಕುಗೊಳಿಸಲಾಗಿದೆ.

Share This Article