ಮಂಡ್ಯ: ತಂದೆ ಮತ್ತು ಗಂಡನಿಗೆ ಮೆಸೇಜ್ ಮಾಡಿ ಗೃಹಿಣಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ನಡೆದಿದೆ.
ಮೈಸೂರು ಜಿಲ್ಲೆ ಬನ್ನೂರು ತಾಲೂಕಿನ ಯಾಚೇನಹಳ್ಳಿ ಗ್ರಾಮದ ಜಯಂತ್ ಎಂಬವರ ಪತ್ನಿ ಉಷಾ ಪ್ರಿಯಾ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಉಷಾ ಅವರ ಮೃತದೇಹ ಇಂದು ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.
ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಉಷಾ ಭೀಮನ ಅಮವಾಸ್ಯೆ ದಿನ ಊರಿಗೆ ಹೋಗಿ ಬರುವುದಾಗಿ ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ತನ್ನ ಗಂಡ ಮತ್ತು ಪೋಷಕರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ತಿರೋದಾಗಿ ಮೊಬೈಲ್‍ನಲ್ಲಿ ಮೆಸೇಜ್ ಮಾಡಿದ್ದಾರೆ. ಉಷಾ ಅವರಿಗೆ ಕೇವಲ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿತ್ತು.
ನದಿಯಲ್ಲಿ ಶವ ಪತ್ತೆಯಾದ ವಿಷಯ ತಿಳಿದು ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಿದ್ದಾರೆ.