ಚಾಮರಾಜನಗರ: ನೆರೆಯ ಕೇರಳದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳದಿಂದ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ಆರೋಗ್ಯ ಇಲಾಖೆಯಿಂದ ತಪಾಸಣೆಗೆ ಗುರಿಪಡಿಸಲಾಗುತ್ತಿದೆ. ಕೊರೊನಾ ವೈರಸ್ ಹರಡದಂತೆ ಜಾಗೃತಿ ಮೂಡಿಸಲು ಯತ್ನಿಸಲಾಗುತ್ತಿದ್ದು, ಕೇರಳಕ್ಕೆ ಸನಿಹದಲ್ಲಿರುವ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ಸರ್ಕಾರಿ ಆಸ್ಪತ್ರೆಗಳಲ್ಲಿ ತಲಾ ಒಂದು ಐಸೋಲೇಷನ್ ವಾರ್ಡ್ ತೆರೆಯುವ ಮೂಲಕ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ಇಲಾಖೆ ಸರ್ವ ಸನ್ನದ್ಧವಾಗಿದೆ.
Advertisement
ಮಾರಕ ಕೊರೊನಾ ವೈರಸ್ ಕೇರಳದ ಮೂಲಕ ಭಾರತಕ್ಕೂ ಕಾಲಿಟ್ಟಿದೆ. ಈಗಾಗಲೇ ಕೇರಳದಲ್ಲಿ ಮೂವರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಕೇರಳ ರಾಜ್ಯದ ಗಡಿಗೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಚಾಮರಾಜನಗರ ಜಲ್ಲೆ ಗುಂಡ್ಲುಪೇಟೆ ಮಾರ್ಗವಾಗಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 ನಿತ್ಯ ಸಾವಿರಾರು ಮಂದಿ ಪ್ರಯಾಣಿಸುತ್ತಾರೆ ಮೂಲೆಹೊಳೆ ಚೆಕ್ ಪೋಸ್ಟ್ ಹಾಗು ಬಂಡೀಪುರ ಚೆಕ್ ಪೋಸ್ಟ್ ಗಳಲ್ಲಿ ಕೇರಳದಿಂದ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ಆರೋಗ್ಯ ಇಲಾಖೆಯಿಂದ ತಪಾಸಣೆಗೆ ಒಳಪಡಿಸಲಾಗುತ್ತಿದೆ.
Advertisement
Advertisement
ಕೇರಳದ ತ್ರಿಶೂರ್ ಬಳಿ ಒಬ್ಬ ವ್ಯಕ್ತಿಗೆ ಕೊರೊನ ವೈರಸ್ ಇದೆ ಇರುವದು ಪತ್ತೆಯಾಗಿದ್ದು, ತ್ರಿಶೂರ್ ನಿಂದ ಬರುವ ಜನರ ಮೇಲೆ ಹೆಚ್ಚಿನ ಕಣ್ಗಾವಲು ಇಡಲಾಗಿದೆ. ಮೂಲೆಹೊಳೆ ಹಾಗೂ ಬಂಡೀಪುರ ಚೆಕ್ ಪೋಸ್ಟ್ ಬಳಿ ವೈದ್ಯಕೀಯ ಸಿಬ್ಬಂದಿ ಪ್ರಯಾಣಿಕರ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಯಾರಿಗಾದರು ಜ್ವರ, ಶೀತ ನೆಗಡಿ, ಕೆಮ್ಮು ಬೇಧಿಯ ಲಕ್ಷಣ ಇದೆಯಾ ಎಂಬುದರ ಬಗ್ಗೆ ನಿಗಾ ವಹಿಸಿದ್ದಾರೆ. ಅಲ್ಲದೆ ಕೊರೊನಾ ವೈರಸ್ ಹರಡದಂತೆ ಜಾಗೃತಿ ಮೂಡಿಸುವ ಕರಪತ್ರ ಹಂಚುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ಸರ್ಕಾರಿ ಆಸ್ಪತ್ರೆಗಳಲ್ಲಿ ತಲಾ ಒಂದು ಐಸೋಲೇಷನ್ ವಾರ್ಡ್ ತೆರೆಯಲಾಗಿದೆ. ಇದನ್ನೂ ಓದಿ: ಚೀನಾದಿಂದ ಬಂದ ಹುಬ್ಬಳ್ಳಿ ಟೆಕ್ಕಿಗೆ ಕರೋನಾ ವೈರಸ್ ಶಂಕೆ – ವರದಿಗಾಗಿ ಕಾಯ್ತಿರೋ ವೈದ್ಯರು
Advertisement
ಚೀನಾದಲ್ಲಿ ಮುನ್ನೂರಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡು ನೆರೆಯ ಕೇರಳಕ್ಕೂ ಕಾಲಿಟ್ಟಿರುವ ಕೊರೊನಾ ವೈರಸ್ ಗಡಿ ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿರುವುದು ಸುಳ್ಳಲ್ಲ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕೊರೊನಾ ವೈರಸ್ ಎಂದರೇನು? ಹೇಗೆ ಹರಡುತ್ತೆ? ರೋಗ ಲಕ್ಷಣವೇನು?