Monday, 16th December 2019

Recent News

ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬಿಎಸ್‍ವೈ

ಬೆಂಗಳೂರು: ಮೈತ್ರಿ ಸರ್ಕಾರ ಉರುಳಿದ ಬಳಿಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಬಿಎಸ್ ಯಡಿಯೂರಪ್ಪ ಅವರು ಸಂಪುಟ ರಚನೆ ಹಿನ್ನೆಲೆಯಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯೊಂದಿಗೆ ಹೈಕಮಾಂಡ್ ಭೇಟಿಗೆ ತೆರಳಿರುವ ಬಿಎಸ್‍ವೈ ಅವರು ಕೇಂದ್ರದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಉತ್ತರ ಕರ್ನಾಟಕದ ಭಾಗದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಇಂದು ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್‍ವೈ ಅವರು ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹದಲ್ಲಿ ಸಿಲುಕಿರುವ ಗ್ರಾಮಗಳಲ್ಲಿನ ಜನರ ರಕ್ಷಣೆಗೆ ಹಾಗೂ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆದರು. ಆ ಬಳಿಕ ಸಂಜೆ ವೇಳೆಗೆ ಬೆಂಗಳೂರಿಗೆ ಆಗಮಿಸಿದರು.

ಸಂಪುಟ ವಿಸ್ತರಣೆಯ ಕುರಿತು ಪೂರ್ವ ನಿಗಧಿಯಂತೆ ಇಂದು ಸಂಜೆ ವೇಳೆಗೆ ಬಿಎಸ್‍ವೈ ಅವರು ತಮ್ಮ ನಿವಾಸದಿಂದ ದೆಹಲಿಗೆ ತೆರಳಲು ಅಂತರಾಷ್ಟ್ರಿಯ ವಿಮಾನ ನಿಲ್ದಾಣಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತ. ಸ್ವಾತಂತ್ರ್ಯ ನಂತರ ಪ್ರಧಾನಿ ಮೋದಿ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಇದನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಗತ ಮಾಡುತ್ತಾರೆ. ‘ಏಕ್ ದೇಶ್ ಮೇ ದೋ ಪ್ರಧಾನ್, ದೋ ವಿಧಾನ್, ದೋ ನಿಶಾನ್ ನಹಿ ಚಲೇಗಾ, ನಹಿ ಚಲೇಗಾ’ ಎಂದು ಹೋರಾಟ ಮಾಡಿ ಶ್ಯಾಮ್ ಪ್ರಸಾದ್ ಮುಖರ್ಜಿ ಹುತಾತ್ಮರಾದರು. ಇಂದು ಶ್ಯಾಮ ಪ್ರಸಾದ್ ಮುಖರ್ಜಿ ಅವರ ಆತ್ಮಕ್ಕೆ ಶಾಂತಿ ಸಿಕ್ಕಿದೆ. ಇದಕ್ಕಾಗಿ ಮತ್ತೊಮ್ಮೆ ನಾನು ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದರು.

ಕೇಂದ್ರ ನಾಯಕರನ್ನು ಭೇಟಿ ಮಾಡಲಿರುವ ಬಿಎಸ್ ಯಡಿಯೂರಪ್ಪ ಅವರು, ಸಚಿವ ಸಂಪುಟ ರಚನೆ ಮಾತ್ರವಲ್ಲದೇ, ರಾಜ್ಯದ ಅಭಿವೃದ್ಧಿ ಹಾಗೂ ವಿವಿಧ ಯೋಜನೆಗಳಲ್ಲಿ ರಾಜ್ಯಕ್ಕೆ ಸಿಗಬೇಕಾದ ಬಾಕಿ ಅನುದಾನ ಸಂಬಂಧ ಕೇಂದ್ರದ ಸಚಿವರ ಜೊತೆ ಚರ್ಚೆ ನಡೆಸಲಿದ್ದಾರೆ. ಮುಂದಿನ ನಾಲ್ಕು ದಿನಗಳ ಕಾಲ ಸಿಎಂ ಬಿಎಸ್‍ವೈ ದೆಹಲಿಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರನ್ನು ಪಕ್ಷೇತರ ಶಾಸಕ ನಾಗೇಶ್ ಅವರು ಭೇಟಿ ಮಾಡಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಬಿಎಸ್‍ವೈ ದೆಹಲಿಗೆ ಕೊಂಡ್ಯೊಯುತ್ತಿರುವ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯಲ್ಲಿ ನಾಗೇಶ್ ಅವರ ಹೆಸರು ಕೂಡ ಸೇರಿದೆ ಎಂಬ ಮಾಹಿತಿ ಲಭಿಸಿದ್ದು, ಈ ಹಿನ್ನೆಲೆಯಲ್ಲಿಯೇ ಬಿಎಸ್‍ವೈ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *