ಬೀದರ್: ಆಪರೇಷನ್ ಕಮಲ ಆಡಿಯೋ ಪ್ರಕರಣದಿಂದ ಸ್ವಲ್ಪ ರಿಲೀಫ್ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪ ಅವರು ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲು ಹುಮ್ನಾಬಾದ್ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ಕೋರ್ಟ್ ನಿಂದ ಆಪರೇಷನ್ ಕಮಲ ಆಡಿಯೋ ಎಫ್‍ಐಆರ್ ಗೆ ತಡೆಯಾಜ್ಞೆ ಆದೇಶ ಬರುತ್ತಿದ್ದಂತೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಯಡಿಯೂರಪ್ಪ ಅವರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಪಕ್ಷದ ಮುಖಂಡರು ಸಾತ್ ನೀಡಿದರು.
ಬಳಿಕ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ದ್ವೇಷದ ರಾಜಕಾರಣ ಮಾಡಲು ಹೊರಟಿದ್ದರು. ಆದರೆ ಕೋರ್ಟ್ ನನಗೆ ನ್ಯಾಯ ಒದಗಿಸಿಕೊಟ್ಟಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ನ್ಯಾಯಾಲಯ, ದೇವರ ಬಗ್ಗೆ ನನಗೆ ಅಪಾರ ವಿಶ್ವಾಸವಿದೆ. ಹೀಗಾಗಿ ನನಗೆ ಅನ್ಯಾಯವಾಗಲಿಲ್ಲ ಎಂದು ಕಿಡಿಕಾರಿದರು.
ಮೋದಿ ವಿಜಯ್ ಸಂಕಲ್ಪ ಯಾತ್ರೆಗೆ ಕೇಂದ್ರ ಸಚಿವ ಪುರುಷೋತ್ತಮ ರೂಪಾಲ್ ಚಾಲನೆ ನೀಡಿದರು. ಶಾಸಕರಾದ ಶ್ರೀರಾಮಲು, ಆರ್.ಅಶೋಕ್, ಪ್ರಭು ಚವ್ಹಾಣ್, ಗೋವಿಂದ ಕಾರಜೋಳ ಸೇರಿದಂತೆ ಅನೇಕ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಭಾಗಿಯಾಗಿದ್ದರು.
ಕೋರ್ಟ್ ಆದೇಶ ಏನು?:
ದೇವದುರ್ಗ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್ ವಿಚಾರಣೆಗೆ ತಡೆ ಕೋರಿ ಬಿಎಸ್‍ವೈ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಿದ್ದರು. ಇಂದು ಹೈಕೋರ್ಟ್ ನ್ಯಾಯಮೂರ್ತಿ ಪಿಜಿಎಂ ಪಾಟೀಲ್ ಅವರು ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ಬಿ.ಎಸ್.ವೈ ಸೇರಿದಂತೆ ನಾಲ್ವರ ವಿರುದ್ಧ ದೇವದುರ್ಗ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ ಶರಣಗೌಡ ದೇವದುರ್ಗ ಠಾಣೆಯಲ್ಲಿ ದೂರು ನೀಡಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv