Monday, 16th December 2019

Recent News

ದೇಶ ಮೊದಲು, 370 ಕಲಂ ರದ್ದತಿಯನ್ನು ಸ್ವಾಗತಿಸುತ್ತೇನೆ: ಅಂಜಲಿ ನಿಂಬಾಳ್ಕರ್

ಬೆಂಗಳೂರು: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಮಧ್ಯೆಯೇ ಒಡಕು ಮೂಡಿದೆ. ನನಗೆ ದೇಶ ಮೊದಲು ಜಮ್ಮು- ಕಾಶ್ಮೀರ ವಿಶೇಷಾಧಿಕಾರ ರದ್ದು ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ನೇ ವಿಧಿ ಮತ್ತು 35 (ಎ)ನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಇದು ಸಂವಿಧಾನ ವಿರೋಧಿ ನೀತಿ ಎಂದು ಅಸಮಾಧಾನ ಹೊರಹಾಕುತ್ತಿರುವ ಸಮಯದಲ್ಲಿ ಬೆಳಗಾವಿಯ ಖಾನಪುರದ ಶಾಸಕಿ ಅಂಜಲಿ ನಿಂಬಾಳ್ಕರ್ ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅಂಜಲಿ ನಿಂಬಾಳ್ಕರ್, ನಮಗೆ ದೇಶ ಮೊದಲು, ನವ ಭಾರತ ನಿಮ್ಮೊಂದಿಗೆ ಇದೆ ಜಮ್ಮು- ಕಾಶ್ಮೀರ ವಿಶೇಷಾಧಿಕಾರ ರದ್ದು ಮಾಡಿದ್ದನ್ನು ಸ್ವಾಗತಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

ಈ ವಿಚಾರವನ್ನು ಬೆಂಬಲಿಸಿದ್ದ ಕಾಂಗ್ರೆಸ್‍ನ ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಭಾರತದ ಒಕ್ಕೂಟಕ್ಕೆ ಸೇರಿಸುವುದಕ್ಕೆ ಬೆಂಬಲ ನೀಡುತ್ತೇನೆ. ಈ ಮೂಲಕ ಭಾರತವು ಸಂಪೂರ್ಣ ಏಕೀಕರಣವಾಗಲಿದೆ. ಆದರೆ ಸಾಂವಿಧಾನಿಕ ಪ್ರಕ್ರಿಯೆಯನ್ನು ಅನುಸರಿಸಿದ್ದರೆ ಚೆನ್ನಾಗಿರುತ್ತಿತ್ತು. ಆಗ ಯಾವುದೇ ಪ್ರಶ್ನೆಗಳನ್ನು ಎತ್ತಲು ಸಾಧ್ಯವಾಗುತ್ತಿರಲಿಲ್ಲ. ಅದೇನೇ ಇದ್ದರೂ, ಇದು ನಮ್ಮ ದೇಶದ ಹಿತಾಸಕ್ತಿ ಮತ್ತು ನಾನು ಇದನ್ನು ಬೆಂಬಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು. ಇದನ್ನು ಓದಿ: ಸಿದ್ಧಾಂತಗಳಿಂದಲೇ ಕಾಂಗ್ರೆಸ್ ಆತ್ಮಹತ್ಯೆ – ಪಕ್ಷವನ್ನೇ ತ್ಯಜಿಸಿದ ಕೈ ನಾಯಕ

ಈ 370 ಕಲಂ ರದ್ದು ಮಾಡಿದ ನಂತರ ಈ ವಿಚಾರವಾಗಿ ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದ ಸೋನಿಯಾ ಗಾಂಧಿ ಅವರು, ಕೇಂದ್ರ ಸರ್ಕಾರದ ನಡೆಯನ್ನು ನಾವು ವಿರೋಧಿಸುತ್ತೇವೆ. ಆದರೆ, ನಮ್ಮ ವಿರೋಧವು ಜಮ್ಮು ಮತ್ತು ಕಾಶ್ಮೀರದ ಜನತೆ ಹಾಗೂ ರಾಜ್ಯದ ವಿಧಾನಸಭೆಯನ್ನು ಸಂಪರ್ಕಿಸದಿರುವುದನ್ನು ಆಧರಿಸಿದೆ ಎಂದು ಕಾಂಗ್ರೆಸ್ ಸಂಸದರು ಹಾಗೂ ನಾಯಕರಿಗೆ ಸಭೆಯಲ್ಲಿ ಸ್ಪಷ್ಟಪಡಿಸಲಾಗಿತ್ತು.

ರಾಹುಲ್ ಗಾಂಧಿ ಟ್ವೀಟ್ ಮಾಡಿ ಏಕಪಕ್ಷೀಯವಾಗಿ ಜಮ್ಮು ಮತ್ತು ಕಾಶ್ಮೀರವನ್ನು ಇಬ್ಭಾಗ ಮಾಡುವ ನಿರ್ಧಾರ ಕೈಗೊಳ್ಳುವುದು, ಜನಪ್ರತಿನಿಧಿಗಳನ್ನು ಬಂಧಿಸುವುದು ಹಾಗೂ ಸಂವಿಧಾನವನ್ನು ಉಲ್ಲಂಘಿಸುವ ಮೂಲಕ ರಾಷ್ಟ್ರದ ಏಕೀಕರಣವನ್ನು ಹೆಚ್ಚಿಸಲು ಸಾಧ್ಯವಿಲ್ಲ. ಜನರಿಂದ ದೇಶ ನಿರ್ಮಾಣವಾಗಿದೆ. ಇದು ಕೇವಲ ತುಂಡು ಭೂಮಿಯಲ್ಲ. ಆಡಳಿತಾತ್ಮಕ ಅಧಿಕಾರದ ದುರುಪಯೋಗ ಮಾಡಿರುವುದು ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಿದ್ದರು.

Leave a Reply

Your email address will not be published. Required fields are marked *