ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ(Basavaraj Horatti) ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ (BK Hariprasad) ಅವರ ಸುದೀರ್ಘ ಮನವೊಲಿಕೆಯ ಬಳಿಕ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು.
ಈಗ ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಮೇಲ್ಮನೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಬಲ ಹೆಚ್ಚಿರುವುದರಿಂದ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಕಾಂಗ್ರೆಸ್ ವರಿಷ್ಠರು ಈಗಾಗಲೇ ಅಂತಿಮಗೊಳಿಸಿದ್ದಾರೆ.



