ಬೆಂಗಳೂರು: ವಿಧಾನ ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಮೂಲಗಳು ತಿಳಿಸಿವೆ.
ಬಿಎಸ್‍ಪಿಯ ಎನ್.ಮಹೇಶ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಗೆ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಆಯ್ಕೆ ಸಾಧ್ಯತೆ ಇದೆ. ತೆರವಾದ ಖಾತೆ ಈಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಳಿಯೇ ಇದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪರೀಕ್ಷೆಗಳು ಹತ್ತಿರವಾಗುತ್ತಿದ್ದು, ಬಹಳ ದಿನಗಳ ಕಾಲ ಖಾತೆ ಮುಖ್ಯಮಂತ್ರಿಗಳ ಬಳಿ ಇರಿಸಲು ಅಸಾಧ್ಯ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಮೈತ್ರಿ ಸರ್ಕಾರದಲ್ಲಿ ಭಾರೀ ಲಾಬಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಬಸವರಾಜ ಹೊಟ್ಟಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅಷ್ಟೇ ಅಲ್ಲದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಮನವಿಗೆ ಬಸವರಾಜ ಹೊರಟ್ಟಿ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎನ್ನುವ ನಂಬಿಕೆಯಿಂದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಸಚಿವ ಸಂಪುಟ ವಿಸ್ತರಣೆಗೂ ಮುನ್ನವೇ ಬಸವರಾಜ ಹೊರಟ್ಟಿ ಅವರಿಗೆ ಮಂತ್ರಿಗಿರಿ ಸಿಗಲಿದೆ. ಈ ಹಿಂದೆಯೇ ಅವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದರು. ಈಗ ಆ ಭಾಗ್ಯ ಕೂಡಿಬಂದಿದೆ ಎನ್ನಲಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv