ವಿಜಯಪುರ: ರಾಜಕೀಯ ವಿಚಾರಗಳಲ್ಲಿ ಸ್ವಾಮೀಜಿಗಳು ಭಾಗಿಯಾಗಬಾರದು ಎಂದು ಹಂಗಾಮಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಮಾತನಾಡಿದ ಅವರು, ದಿಂಗಾಲೇಶ್ವರ ಸ್ವಾಮೀಜಿಗೆ ಮಾಡಲು ಕೆಲಸವಿಲ್ಲ. ಅದಕ್ಕಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಚಾರದಲ್ಲಿ ಮೂಗು ತೋರಿಸುತ್ತಿದ್ದಾರೆ. ಇನ್ನು ಕೆಲವು ಸ್ವಾಮೀಜಿಗಳು ಅವರ ಹಾಗೆಯೇ ಮಾಡುತ್ತಿದ್ದಾರೆ. ಸ್ವಾಮೀಜಿಗಳಿಗೆ ಏಕೆ ಬೇಕು ರಾಜಕೀಯ ಎಂದು ಪ್ರಶ್ನಿಸಿದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಸಂಪೂರ್ಣ ನನ್ನ ವಿರೋಧವಿದೆ. ಅಖಂಡ ಕರ್ನಾಟಕ ನಿರ್ಮಾಣಕ್ಕೆ ಅನೇಕ ನಾಯಕರು, ಹೋರಾಟಗಾರರು ಶ್ರಮಿಸಿದ್ದಾರೆ. ಈಗ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ. ಈ ಕುರಿತು ನಿನ್ನೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆಗೆ ಚರ್ಚೆ ಮಾಡಿರುವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಮುಂದಿನ ಕೆಲವು ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ಸಭೆ ಕರೆಯುವ ನಿರ್ಧಾರ ಕೈಗೊಂಡಿದ್ದಾರೆ. ಆಗ ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎಂದು ಹೇಳಿದರು.
ವಿಜಯಪುರ, ಹುಬ್ಬಳ್ಳಿ ಅಥವಾ ಬೆಳಗಾವಿಯಲ್ಲಿ ಸಭೆಯನ್ನು ನಡೆಸುವ ನಿರ್ಧಾರ ಮಾಡಲಾಗುತ್ತದೆ. ಸಭೆಯಲ್ಲಿ ಹೋರಾಟಗಾರು, ಮಠಾಧೀಶರು ಭಾಗವಹಿಸುತ್ತಾರೆ. ಆಗ ಚರ್ಚಿಸಿ, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ನಿಜವಾದರೆ ಸರಿಪಡಿಸುವ ಕ್ರಮ ಕೈಗೊಳ್ಳಲಾಗುವುದು. ಆದರೆ ವೈಯಕ್ತಿಕ ರಾಜಕಾರಣಕ್ಕಾಗಿ ಪ್ರತ್ಯೇಕ ರಾಜ್ಯ ಬಗ್ಗೆ ವಿಚಾರ ಮಾಡಬಾರದು ಎಂದು ತಿಳಿಸಿದರು.