ರಾಮನಗರ: ರೈತರಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಸಂಬಂಧ ಭಾನುವಾರ ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಸಹಕಾರಿ ಸಚಿವ ಜೊತೆ ಚರ್ಚೆ ನಡೆಸಿ ಬಳಿಕ ಸೋಮವಾರ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ ಭರವಸೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾತ್ರಿ ನಡೆದ ಜಿಲ್ಲೆಯ ಕೃಷಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಹಾವಳಿಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿ ಇದ್ದಾರೆ. ಅವರನ್ನು ಈ ಕೂಪದಿಂದ ಮೇಲೆತ್ತುವುದು ನಮ್ಮ ಮೊದಲ ಆದ್ಯತೆ ಆಗಲಿದೆ. ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ, ಕೃಷಿ ಮಾರುಕಟ್ಟೆ ಸಚಿವರ ಜೊತೆಗೂಡಿ ಈ ಸಂಬಂಧ ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗುವುದು ಎಂದು ತಿಳಿಸಿದರು.
Advertisement
Advertisement
ಸದ್ಯ 19 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದು, ರೈತರು ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಇನ್ನೂ ಮೂರು ತಿಂಗಳು ಪರಿಸ್ಥಿತಿ ಹೀಗೇ ಮುಂದುವರಿದರೆ ಕೃಷಿ ಮಾಡುವುದು ಕಷ್ಟವಿದೆ. ಹೀಗಾಗಿ ಕೃಷಿ ಚಟುವಟಿಕೆ ಉತ್ತೇಜನಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಸಿದ್ಧವಿದೆ ಎಂದರು. ಸಭೆಯಲ್ಲಿ ಸಂಸದ ಡಿಕೆ ಸುರೇಶ್, ವಿಧಾನಪರಿಷತ್ ಸದಸ್ಯರಾದ ಸಿ.ಎಂ ಲಿಂಗಪ್ಪ, ಎಚ್.ಎಂ.ರೇವಣ್ಣ, ಎಸ್.ರವಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.