ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಷ್ಯಾ ಕಪ್ (Asia Cup) ಗೆದ್ದ ಭಾರತ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗೆ ಬಿಸಿಸಿಐ (BCCI) ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ.
ಇದಲ್ಲದೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನಿಂದ (ACC) ಚಾಂಪಿಯನ್ ತಂಡಕ್ಕೆ 2.6 ಕೋಟಿ ರೂ. ಟೂರ್ನಿಯ ಬಹುಮಾನ ಸಿಕ್ಕಿದೆ. ರನ್ನರ್ ಅಪ್ ಪಾಕಿಸ್ತಾನ ತಂಡ ಕೇವಲ 1.3 ಕೋಟಿ ರೂ. ಬಹುಮಾನ ಪಡೆದುಕೊಂಡಿದೆ. ಇದನ್ನೂ ಓದಿ: ಏಷ್ಯಾಕಪ್‌ನಲ್ಲಿ ಭಾರತಕ್ಕೆ ಸಿಂಧೂರ ʼತಿಲಕʼ!
ಮೈದಾನದಲ್ಲಿ ಭಾರೀ ಹೈಡ್ರಾಮಾ
ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ (Pakistan) ವಿರುದ್ಧ ಭಾರತ ಗೆದ್ದರೂ, ಏಷ್ಯಾ ಕಪ್ ಟ್ರೋಫಿ ತಂಡದ ಕೈ ಸೇರಿಲ್ಲ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮತ್ತು ಪಾಕಿಸ್ತಾನದ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಇಂಡಿಯಾ ತಂಡ ನಿರಾಕರಿಸಿದ ಕಾರಣ ವಿಜೇತ ತಂಡಕ್ಕೆ ಟ್ರೋಫಿಯನ್ನು ನೀಡದ ವಿಚಿತ್ರ ಘಟನೆ ನಡೆಯಿತು.
ತಡರಾತ್ರಿ ನಡೆದ ಈ ನಾಟಕೀಯ ಬೆಳವಣಿಗೆಯಿಂದಾಗಿ, ಸೂರ್ಯಕುಮಾರ್ ಯಾದವ್ (Suryakumar Yadav) ನೇತೃತ್ವದ ಭಾರತೀಯ ತಂಡವು ಟ್ರೋಫಿ ಇಲ್ಲದೆಯೇ ತಮ್ಮ ವಿಜಯ ಆಚರಿಸಬೇಕಾಯಿತು. ಇದನ್ನೂ ಓದಿ: ಪಾಕ್ ವಿರುದ್ಧ ಗೆದ್ದ ಭಾರತಕ್ಕೆ ಏಷ್ಯಾ ಕಪ್ – ಸಿದ್ದರಾಮಯ್ಯ, ಹೆಚ್‌ಡಿಕೆ ಅಭಿನಂದನೆ
ಭಾನುವಾರ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿದ ಭಾರತ, ಪ್ರಶಸ್ತಿ ಪ್ರದಾನ ಸಮಾರಂಭಕ್ಕಾಗಿ ಕಾಯುತ್ತಿತ್ತು. ಆದರೆ, ವಿಜೇತರ ಟ್ರೋಫಿಯನ್ನು ಯಾರು ನೀಡುತ್ತಾರೆ ಎಂದು ಭಾರತೀಯ ತಂಡದ ಆಡಳಿತ ಮಂಡಳಿ ವಿಚಾರಿಸಿದಾಗ, ಅದು ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಎಂದು ತಿಳಿದು ಬಂತು. ಪಾಕಿಸ್ತಾನಿ ಸಚಿವರಾಗಿರುವ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಭಾರತ ತಂಡವು ಸ್ಪಷ್ಟವಾಗಿ ನಿರಾಕರಿಸಿತು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಳಂಬ
ಈ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಬಹಳ ವಿಳಂಬವಾಗಿ ನಡೆಯಿತು. ನಖ್ವಿ ವೇದಿಕೆಯ ಮೇಲೆ ಬಂದು ನಿಂತಾಗ, ಭಾರತೀಯ ಆಟಗಾರರು ಸುಮಾರು 15 ಗಜಗಳಷ್ಟು ದೂರದಲ್ಲಿಯೇ ನಿಂತು, ಮುಂದೆ ಬರಲು ಒಪ್ಪಲೇ ಇಲ್ಲ. ಈ ಸಂದರ್ಭದಲ್ಲಿ, ಇನ್ನೂ ಕ್ರೀಡಾಂಗಣದಲ್ಲಿದ್ದ ಭಾರತೀಯ ಅಭಿಮಾನಿಗಳು ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುತ್ತಾ ನಖ್ವಿಯವರನ್ನು ಹೀಯಾಳಿಸಿದರು. ಇದನ್ನೂ ಓದಿ: ಪಾಕ್ ಸಚಿವನಿಂದ ಏಷ್ಯಾಕಪ್ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಟೀಂ ಇಂಡಿಯಾ