ಚಿಕ್ಕೋಡಿ: ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಮಠ ಮಾನ್ಯಗಳು ಹಾಗೂ ಸಂಘ ಸಂಸ್ಥೆಗಳ ಪಾತ್ರ ಅಗಾಧವಾಗಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ದುರದುಂಡೇಶ್ವರ ವಿದ್ಯಾವರ್ಧಕ ಸಂಘದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಮತ್ತು ಕಾಯಕಯೋಗಿ ಬಸಗೌಡ ಪಾಟೀಲ್ ಅವರ ಕಂಚಿನ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮಕ್ಕೆ ಸುತ್ತೂರು ಶ್ರೀಗಳು ಆಗಮಿಸಿದ್ದರು. ಈ ವೇಳೆ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ಶಿಕ್ಷಣ ಕಲಿಸಬೇಕಾದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಬಡ ಜನರಲ್ಲಿ ಶಿಕ್ಷಣದ ಅರಿವು ಮೂಡಿಸುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಮಠಗಳು ಹಾಗೂ ಸಂಘ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಸಮಾರಂಭದಲ್ಲಿ ಆಶೀರ್ವಚನ ನೀಡಿದ ವಿಜಯಪುರ ಯೋಗಜ್ಞಾನಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ಎಲ್ಲ ದಾನಕ್ಕಿಂತ ಶಿಕ್ಷಣ ದಾನ ಶ್ರೇಷ್ಠವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣದ ದಾನ ನೀಡುತ್ತಿರುವ ದುರದುಂಡೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯ ಜನ ಮೆಚ್ಚುಗೆಗೆ ಕಾರಣವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾ ದಾನ ನೀಡಿರುವ ಈ ಸಂಸ್ಥೆಯ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದರು.
ಸಮಾರಂಭದಲ್ಲಿ ಗದಗದ ತೊಂಟದ ಸಿದ್ದರಾಮ ಮಹಾಸ್ವಾಮೀಜಿಗಳು, ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಚಿವ ಎ.ಬಿ.ಪಾಟೀಲ್, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಭಾಗವಹಿಸಿ ಹಲವಾರು ಮಾಠಾಧೀಶರು ಉಪಸ್ಥಿತರಿದ್ದರು.