ಬೆಳಗಾವಿ: ವೈದ್ಯಕೀಯ ಕೋರ್ಸ್ (Medical Course) ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಗೆ (Compulsory Rural Service) ವಿನಾಯಿತಿ ನೀಡಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಕಡ್ಡಾಯ ಗ್ರಾಮೀಣ ಸೇವಾ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ವಿಧಾನ ಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಿದ್ದಾರೆ.
ಮಸೂದೆಯಲ್ಲಿ ‘ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆ’ ಎಂಬ ಪದಗಳ ಮೊದಲಿಗೆ ‘ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಗಳಲ್ಲಿ‘ ಎಂಬ ಪದಗಳನ್ನ ಸೇರಿಸುವ ಮೂಲಕ ತಿದ್ದುಪಡಿ ತರಲಾಗುತ್ತಿದೆ. ಈ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಸೇವೆಯನ್ನ ಬಳಸಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ.
ಈ ಹಿಂದೆ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆ ಜಾರಿಗೆ ತಂದ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇತ್ತು. ಹೀಗಾಗಿ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದವರು, ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿ ಸರ್ಟಿಫಿಕೇಟ್ ಪಡೆಯಬೇಕು ಎಂಬ ನೀತಿಯನ್ನ ಸರ್ಕಾರ ಅನುಸರಿಸಿತ್ತು. ಆದರೆ ಇತ್ತೀಚಿಗೆ ವೈದ್ಯಕೀಯ ಸ್ನಾತಕೋತ್ತರ ಹಾಗೂ ಎಂಬಿಬಿಎಸ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿ ಹೊರಬರುತ್ತಿರುವುದರಿಂದ, ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಒಂದು ವರ್ಷದ ಸೇವೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಕಡ್ಡಾಯ ಸೇವೆಯಡಿ ಕಾರ್ಯನಿರ್ವಹಿಸುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ರಾಜ್ಯ ಸರ್ಕಾರವೇ ನಿರ್ಧರಿಸುವ ಅಧಿಕಾರ ಹೊಂದಿದೆ. ಅಲ್ಲದೇ ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆಗೆ 3,000ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಆದರೆ ಖಾಲಿ ಹುದ್ದೆಗಳ ಸಂಖ್ಯೆ 1,900 ಇದ್ದು, ತಿದ್ದುಪಡಿ ಮಸೂದೆಯ ಮೂಲಕ ಕಡ್ಡಾಯ ಸೇವೆ ಖಾಲಿ ಹುದ್ದೆಗಳಿಗೆ ಮಾತ್ರ ಸೀಮಿತಗೊಳ್ಳಲಿದೆ.