ಬೆಂಗಳೂರು: ದೇಶಾದ್ಯಂತ ಕೂರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಾಗುತ್ತಿರುವುದು ಕೇಂದ್ರ ಸರ್ಕಾರದ ನೆಮ್ಮದಿಯನ್ನು ಕೆಡಿಸಿದೆ. ಈ ನಿಟ್ಟಿನಲ್ಲಿ ಕೇಂದ್ರವು ಹಲವು ಗಂಭೀರ ಮತ್ತು ಪರಿಣಾಮಕಾರಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ರಾಜ್ಯಗಳ ಮಟ್ಟದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಪಡೆಯಲು ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಮುಂದಾಗಿದ್ದಾರೆ.
ನಾಳೆ ಪ್ರಧಾನಿ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರುಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದು, ಕೊರೊನಾ ನಿಯಂತ್ರಣ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಪ್ರಧಾನಮಂತ್ರಿಗಳಿಂದ ದೇಶದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರುಗಳೊಂದಿಗೆ ಏಕಕಾಲದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ.
Advertisement
Advertisement
ಮುಖ್ಯಮಂತ್ರಿ ಯಡಿಯೂರಪ್ಪ ಸಹ ಪ್ರಧಾನಿಗಳ ವಿಡಿಯೋ ಸಂವಾದಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಗೂ ಮುನ್ನ ಸಿಎಂ ಯಡಿಯೂರಪ್ಪ ಅವರು ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ಕರೆದಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಚಿವರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ನಾಳೆ ಮಧ್ಯಾಹ್ನ 3.30ಕ್ಕೆ ಸಿಎಂ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
Advertisement
Advertisement
ಈ ಸಭೆಯಲ್ಲಿ ರಾಜ್ಯದಲ್ಲಿ ಕೊರೊನಾ ಪೀಡಿತರು, ಶಂಕಿತರು, ನಿಯಂತ್ರಣ ಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಿಎಂ ಪಡೆಯಲಿದ್ದಾರೆ. ನಂತರ ಸಂಜೆ 4 ಗಂಟೆಗೆ ಪ್ರಧಾನಮಂತ್ರಿಗಳು ನಡೆಸುವ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಯಾವ ಸಲಹೆ-ಸೂಚನೆಗಳನ್ನು ಕೊಡುತ್ತಾರೆ ಕಾದು ನೋಡಬೇಕಿದೆ.