– ಕೋರ್ ಕಮಿಟಿ ಸಭೆ ಬಳಿಕ ಮಾಜಿ ಸಚಿವರ ಹೇಳಿಕೆ
– ಅನರ್ಹರಿಗೆ ಶಾಕ್ ಕೊಟ್ಟ ‘ಕಮಲ ಪಡೆ’
ಬೆಂಗಳೂರು: ನಿಗದಿತ ಅವಧಿಯಲ್ಲಿ ಉಪ ಚುನಾವಣೆ ನಡೆದರೆ ಬಿಜೆಪಿಯವರೇ ಅಭ್ಯರ್ಥಿಗಳಾಗಿ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಜಿ ಸಚಿವ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.
ಅನರ್ಹ ಶಾಸಕರಿಗೆ ಉಪ ಚುನಾವಣೆಯ ಟಿಕೆಟ್ ನೀಡುವ ವಿಚಾರವಾಗಿ ಪಕ್ಷದೊಳಗೆ ವಿರೋಧ ಎದ್ದಿದೆ. ಈ ಹಿನ್ನೆಲೆಯಲ್ಲಿ ಬಂಡಾಯ ಶಮನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ತುರ್ತು ಕೋರ್ ಕಮಿಟಿ ಸಭೆ ಕರೆದ್ದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಕೇಂದ್ರ ಸಚಿವ ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಸಿ.ಟಿ.ರವಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಅನೇಕ ನಾಯಕರು ಭಾಗಿಯಾಗಿದ್ದರು.
ಸಭೆಯ ಬಳಿಕ ಮಾತನಾಡಿದ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅರವಿಂದ್ ಲಿಂಬಾವಳಿ, ಉಪ ಚುನಾವಣೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿದೆ. ನಮ್ಮ ಸಂಘಟನೆಯಿಂದ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ಅನರ್ಹ ಶಾಸಕರ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಅವರ ಪರ ವಕೀಲರು ಚುನಾವಣೆ ಮುಂದೂಡುವಂತೆ ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಉಪ ಚುನಾವಣೆ ಬಗ್ಗೆ ಅಂತಿಮ ನಿರ್ಧಾರಕ್ಕೆ ಪಕ್ಷ ಬಂದಿಲ್ಲ ಎಂದು ತಿಳಿಸಿದರು.
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳ ವಿರೋಧದ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಚಿವರು, ಈಗಾಗಲೇ ಕೋರ್ಟಿನಲ್ಲಿ ಉಪ ಚುನಾವಣೆ ಮುಂದೂಡಲು ಮನವಿ ಮಾಡಿದ್ದಾರೆ. ಹಾಗಾಗಿ ನಾವು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡಿಲ್ಲ. ಒಂದು ವೇಳೆ ನಿಗದಿತ ಸಮಯದಲ್ಲಿ ಚುನಾವಣೆ ಬಂದರೆ ನಮ್ಮ ಪಕ್ಷದ ಅಭ್ಯರ್ಥಿಗಳು ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
ಉಪ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸನ್ನದ್ಧಗೊಳಿಸಲು ಸೆಪ್ಟೆಂಬರ್ 27ರಂದು ಬೆಂಗಳೂರಿನಲ್ಲಿ ದಕ್ಷಿಣ ಕರ್ನಾಟಕದ ಉಪ ಚುನಾವಣಾ ಕ್ಷೇತ್ರಗಳ ಕಾರ್ಯಕರ್ತರ ಸಭೆ ನಡೆಸಲಾಗುತ್ತದೆ. ಬಳಿಕ ಸೆಪ್ಟೆಂಬರ್ 29ರಂದು ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕದ ಕ್ಷೇತ್ರಗಳ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಈ ವಿಚಾರವನ್ನು ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.