– ನಳಿನ್ ಕುಮಾರ್ ಕಟೀಲ್, ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ಧವೂ ಕೇಸ್‌ಗೆ ಸೂಚನೆ
– ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪ
ಬೆಂಗಳೂರು: ಚುನಾವಣಾ ಬಾಂಡ್ (Electoral Bonds) ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (ಜೆಎಸ್‌ಪಿ) ಆದರ್ಶ ಅಯ್ಯರ್ ಅವರು ದೂರು ದಾಖಲಿಸಿದ್ದರು. ಇದನ್ನೂ ಓದಿ: ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತೆ: ಹೆಚ್‌ಡಿಕೆ ಬಾಂಬ್
ಬೆಂಗಳೂರಿನಲ್ಲಿ ದಾಖಲಾಗಿರುವ ದೂರಿನಲ್ಲಿ ನಿರ್ಮಲಾ ಸೀತಾರಾಮನ್ ಮಾತ್ರವಲ್ಲದೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಬಿಜೆಪಿ ನಾಯಕರಾದ ನಳಿನ್ ಕುಮಾರ್ ಕಟೀಲ್ ಮತ್ತು ಬಿ.ವೈ.ವಿಜಯೇಂದ್ರ ಅವರ ಹೆಸರೂ ಇದೆ. ಒತ್ತಡದ ತಂತ್ರವಾಗಿ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ದಾಳಿಗಳನ್ನು ಉಲ್ಲೇಖಿಸಿ ಕಾರ್ಪೊರೇಟ್ ಸಂಸ್ಥೆಗಳು ಸಾವಿರಾರು ಕೋಟಿಗಳ ಚುನಾವಣಾ ಬಾಂಡ್‌ಗಳನ್ನು ಖರೀದಿಸಲು ಒತ್ತಾಯಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಎಲೆಕ್ಟೋರಲ್ ಬಾಂಡ್‌ಗಳನ್ನು ಬಿಜೆಪಿ ನಾಯಕರು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ನಗದೀಕರಿಸಿದ್ದಾರೆ ಎಂದು ಹೇಳಲಾಗಿದೆ.
ಚುನಾವಣಾ ಬಾಂಡ್‌ಗಳ ಯೋಜನೆಯು ರಾಜಕೀಯ ಉದ್ದೇಶಗಳಿಗಾಗಿ ಅಕ್ರಮ ಹಣವನ್ನು ಸಂಗ್ರಹಿಸಲು ಅನುಕೂಲ ಮಾಡಿಕೊಟ್ಟಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಸೀತಾರಾಮನ್ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಭಯೋತ್ಪಾದಕ ದಾಳಿ ಎಚ್ಚರಿಕೆ – ಮುಂಬೈನಾದ್ಯಂತ ಪೊಲೀಸರು ಹೈಅಲರ್ಟ್