ಬೆಂಗಳೂರು: ಡಿಯೋ ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ಅತ್ತಿಬೆಲೆ ಬಳಿ ನಡೆದಿದೆ.
ಈ ಘಟನೆ ಹೊಸೂರು ಮುಖ್ಯರಸ್ತೆ ಅತ್ತಿಬೆಲೆಯ ಗೆಸ್ಟ್ ಲೈನ್ ಹೋಟೆಲ್ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದರೆ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮೃತ ಯುವಕರಿಬ್ಬರು 28 ವಯಸ್ಸಿನ ಆಸುಪಾಸಿನವರಾಗಿದ್ದು ಗುರುತು ಪತ್ತೆಯಾಗಿಲ್ಲ. ಡಿಯೋ ಬೈಕಿನಲ್ಲಿ ಮೂರು ಜನ ಯುವಕರು ಹೋಗುತ್ತಿದ್ದಾಗ ಹಿಂಬದಿಯಿಂದ ವೈಬಿಎಂ ಟ್ರಾವೆಲ್ಸ್ ಗೆ ಸೇರಿದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಡಿಯೋ ಬೈಕ್ ಅಪ್ಪಚ್ಚಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತಕ್ಕೆ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.