ಐಎಂಎ ವಂಚನೆ ಪ್ರಕರಣ-ಜಮೀರ್ ಅಹ್ಮದ್‍ಗೆ ಮುಂದುವರಿದ ವಿಚಾರಣೆ

Public TV
2 Min Read
zameer ahmed

ಬೆಂಗಳೂರು: ಐಎಂಎ ವಂಚನೆ ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಮಾಜಿ ಸಚಿವ ಜಮೀರ್ ಅಹ್ಮದ್ ಅವರನ್ನು ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಆರ್.ಟಿ.ನಗರದ ಸಿಬಿಐ ಕಚೇರಿಯಲ್ಲಿ ಜಮೀರ್ ಅಹ್ಮದ್ ವಿಚಾರಣೆ ನಡೆಯಲಿದೆ. ಜಮೀರ್ ಅಹ್ಮದ್ ಸರ್ಫೆಂಟೈನ್ ರಸ್ತೆಯಲ್ಲಿರುವ ನಿವೇಶನವನ್ನು ಕಡಿಮೆ ಬೆಲೆಯಲ್ಲಿ ಮನ್ಸೂರ್ ಖಾನ್‍ಗೆ ಮಾರಿದ್ದರು. ಹೀಗಾಗಿ ಐಎಂಎ ಪ್ರಕರಣದಲ್ಲಿ ಜಮೀರ್ ಅಹ್ಮದ್ ಹೆಸರು ಕೇಳಿ ಬಂದಿತ್ತು.

ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆ ತೋರಿಸಿ ಮನ್ಸೂರ್ ನಿಂದ ಹಣ ಪಡೆದಿರುವ ಆರೋಪವನ್ನು ಜಮೀರ್ ಅಹ್ಮದ್ ಎದುರಿಸುತ್ತಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಸಿಬಿಐ ಮುಂದೆ ದಾಖಲಾತಿಗಳೊಂದಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.

IMA Mansoor Khan

ಜಮೀರ್ ವಿರುದ್ಧದ ಆರೋಪವೇನು?:
ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಜೂನ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಬಿಜೆಪಿ ಮುಖಂಡ ಎನ್. ರಮೇಶ್ ಅವರು, 90 ಕೋಟಿ ರೂ. ಮೌಲ್ಯದ ನಿವೇಶನವನ್ನು ಕೇವಲ 9.38 ಕೋಟಿ ರೂ.ಗೆ ಮಾರಾಟ ಮಾಡಿದ್ದು, ಉಳಿದ 80 ಕೋಟಿ ರೂ.ಗಳನ್ನು ಕಪ್ಪು ಹಣ ಹವಾಲಾ ರೂಪದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪಡೆದಿದ್ದಾರೆ. ವಿವಾದಿತ ನಿವೇಶನವನ್ನು ಅಕ್ರಮ ಮಾರಾಟ ಮಾಡಿ ಉಳಿದ ಹಣವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. 2001ರಲ್ಲಿ ಕೇವಲ ಎರಡೂವರೆ ಕೋಟಿ ರೂ.ಗೆ ನಿವೇಶನವನ್ನು ಖರೀದಿಸಿ ಅಕ್ರಮವಾಗಿ ಐಎಂಎಗೆ ಮಾರಾಟ ಮಾಡಿದ್ದಾರೆ ಎಂದು ದೂರಿದ್ದರು.

ಭೂ ಮಾಲೀಕನಿಗೆ ಕೇವಲ ಎರಡೂವರೆ ಕೋಟಿ ರೂ.ಗಳನ್ನು ನೀಡಿ ಜಮೀನು ಖರೀದಿಸಿದ್ದು, ಅದೇ ಜಮೀನನ್ನು 9 ಕೋಟಿ ರೂ.ಗೆ ಐಎಂಎ ಮಾಲೀಕನಿಗೆ ಮಾರಾಟ ಮಾಡಿದ್ದಾರೆ. ಆದರೆ ಆ ಜಮೀನಿನ ಸದ್ಯದ ಮಾರುಕಟ್ಟೆ ಬೆಲೆ ಕನಿಷ್ಟ 90 ಕೋಟಿ ರೂ.ಗಳಾಗಿದ್ದು, 2018ರಲ್ಲಿ ಮನ್ಸೂರ್ ಖಾನ್‍ಗೆ ಕೇವಲ 9.38 ಕೋಟಿ ರೂ.ಗೆ ಜಮೀರ್ ಅಹ್ಮದ್ ಖಾನ್ ಮಾರಾಟ ಮಾಡಿದ್ದಾರೆ. ಉಳಿದ 80 ಕೋಟಿ ರೂ. ಕಪ್ಪು ಹಣವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

Zameer With IMA 2

9 ವರ್ಷಗಳಿಂದ ರಿಚ್ಮಂಡ್ ಟೌನ್‍ನ ಸರ್ಪಟೈನ್ ಸ್ಟ್ರೀಟ್‍ನಲ್ಲಿರುವ ವಿವಾದಿತ ನಿವೇಶನ ಕೋರ್ಟ್ ಅಂಗಳದಲ್ಲಿದ್ದು, 2014ರಲ್ಲಿ ಆಸ್ತಿ ಪ್ರಕರಣ ಕೋರ್ಟಿನಲ್ಲಿರುವಾಗಲೇ ಜಮೀರ್ ಪಾಲಿಕೆಗೆ ಪತ್ರ ಬರೆದು ಆಸ್ತಿಯನ್ನು ನಾನು ಖರೀದಿಸಿದ್ದೇನೆ ಖಾತೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆಗಲೇ ಪಾಲಿಕೆ ನೌಕರರು ಈ ಆಸ್ತಿ ವ್ಯಾಜ್ಯ ಕೋರ್ಟ್ ನಲ್ಲಿದೆ. ಹೀಗಾಗಿ ಖಾತೆ ಮಾಡಿಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಹೀಗಿದ್ದರೂ ಸಹ ಹತ್ತು ಹಲವು ಬಾರಿ ಪತ್ರ ವ್ಯವಹಾರ ನಡೆಸಿ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ರಮೇಶ್ ಹೇಳಿದ್ದರು.

ತಾವು ಖಾತೆ ಮಾಡಿಸಿದ ನಂತರ ಮನ್ಸೂರ್ ಖಾನ್‍ಗೆ ಮಾರಾಟ ಮಾಡಿರುವ ಜಮೀನಿಗೆ ಖಾತೆ ಮಾಡಿಸಲು ಜಮೀರ್ ಕಸರತ್ತು ಮಾಡಿದ್ದಾರೆ. ಸಚಿವ ಜಮೀರ್ ಸುಳ್ಳು ಲೆಕ್ಕ ಕೊಡುವುದರಲ್ಲಿ ಎಕ್ಸ್ ಪರ್ಟ್. ಚುನಾವಣಾ ಪ್ರಮಾಣಪತ್ರದಲ್ಲೇ ತಪ್ಪು ಮಾಹಿತಿ ನೀಡಿದ್ದು, 2018ರ ವಿಧಾನಸಭೆ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿಯೂ ಮಾಜಿ ಶಾಸಕ ಚೆಲುವರಾಯ ಸ್ವಾಮಿಯಿಂದ 42 ಲಕ್ಷ ಸಾಲ ಪಡೆದಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಚೆಲುವರಾಯ ಸ್ವಾಮಿ ಅದೇ 2018ರ ವಿಧಾನಸಭಾ ಚುನಾವಣೆಯಲ್ಲಿ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಸಾಲ ನೀಡಿರುವ ಮಾಹಿತಿಯನ್ನೇ ನೀಡಿಲ್ಲ ಎಂದು ಎನ್.ಆರ್.ರಮೇಶ್ ಆರೋಪಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *