ಬೆಂಗಳೂರು: ಕನಕಪುರದ ಹಾರೋಬೆಲೆಯಲ್ಲಿರುವ ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಿಸಲು ಅವಕಾಶ ಕೋರಿ ಕ್ರೈಸ್ತರ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದೆ.
ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ಡಾ.ಪೀಟರ್ ಮಚಾಡೊ ನೇತೃತ್ವದ ನಿಯೋಗದಿಂದ ಇಂದು ಮಧ್ಯಾಹ್ನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಿಎಂ ಬಿಎಸ್‍ವೈ ಭೇಟಿ ಮಾಡಿ ಮಾತುಕತೆ ನಡೆಸಲಾಯ್ತು. ಈ ವೇಳೆ ಕಪಾಲ ಬೆಟ್ಟದಲ್ಲಿ ಕ್ರೈಸ್ತ ಪ್ರತಿಮೆ ಸ್ಥಾಪನೆಗೆ ಅವಕಾಶ ಕೊಡುವಂತೆ ಸಿಎಂಗೆ ಮನವಿ ನಿಯೋಗದಿಂದ ಮನವಿ ಮಾಡಲಾಯಿತು.
Advertisement
Advertisement
ಸಿಎಂ ಭೇಟಿ ಬಳಿಕ ಮಾತಾಡಿದ ಪೀಟರ್ ಮಚಾಡೊ, ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿಚಾರದಲ್ಲಿ ಸಿಎಂಗೆ ಮನವಿ ಮಾಡಿದ್ದೇವೆ. ಇದರಲ್ಲಿ ಯಾರೂ ರಾಜಕೀಯ ಮಾಡೋದು ಬೇಡ. ಸುಮಾರು ವರ್ಷಗಳಿಂದಲೂ ಏಸುವನ್ನು ಅಲ್ಲಿ ನಾವು ಪೂಜಿಸುತ್ತಾ ಬಂದಿದ್ದೇವೆ. ಅಲ್ಲಿ ಈಗ ಏಸು ಪ್ರತಿಮೆ ನಿರ್ಮಾಣ ಆಗುತ್ತಿದೆ. ಇದಕ್ಕೆ ವಿರೋಧ ಬೇಡ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ ಎಂದರು.
Advertisement
ಕಪಾಲ ಬೆಟ್ಟದಲ್ಲಿ ಹಿಂದೂ ದೇವತೆಗಳನ್ನು ಪೂಜೆ ಮಾಡುತ್ತಾ ಇದ್ದರು ಎನ್ನುವ ವಿಷಯದ ಬಗ್ಗೆ ನಮಗೆ ಮಾಹಿತಿ ಇಲ್ಲ. ಅಷ್ಟಕ್ಕೂ ಅದು ಕಪಾಲಿ ಬೆಟ್ಟ ಅಲ್ಲ. ಅದು ಕಪಾಲ ಬೆಟ್ಟ. ಕಪಾಲಿ ಬೆಟ್ಟ ಅಂತ ಆಗಿದ್ದು ಹೇಗೆಂದು ಗೊತ್ತಿಲ್ಲ ಅಂತ ಇದೇ ವೇಳೆ ಪೀಟರ್ ಮಚಾಡೊ ಹೇಳಿದರು.
Advertisement
ಕಪಾಲ ಬೆಟ್ಟದ ಸುತ್ತಮುತ್ತಲಿನ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ಆರೋಪವನ್ನೂ ಅವರು ಅಲ್ಲಗಳೆದರು. ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. ಮತಾಂತರ ಮಾಡೋದು ಸುಲಭ ಅಲ್ಲ. ಹಿಂದೆ ಬಂದಿದ್ದ ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿರಬಹದು. ನಾವು ಒಂದೂವರೆ ಲಕ್ಷ ಮಕ್ಕಳಿಗೆ ವಿದ್ಯಾಭ್ಯಾಸ ಕೊಡುತ್ತಿದ್ದೇವೆ. ಒಬ್ಬರನ್ನಾದರೂ ಮತಾಂತರ ಮಾಡಿದ್ದನ್ನು ತೋರಿಸಲಿ ಎಂದು ಪೀಟರ್ ಮಚಾಡೋ ಸ್ಪಷ್ಟಪಡಿಸಿದರು.
ಕ್ರೈಸ್ತರ ನಿಯೋಗಕ್ಕೆ ಮುಖ್ಯಮಂತ್ರಿಗಳು ಯಾವುದೇ ಸ್ಪಷ್ಟ ಭರವಸೆ ಕೊಟ್ಟಿಲ್ಲ ಎನ್ನಲಾಗಿದೆ. ರಾಮನಗರ ಜಿಲ್ಲಾಡಳಿತದಿಂದ ವರದಿ ಕೇಳಿದ್ದೇವೆ. ವರದಿ ಬಂದ ಬಳಿಕ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಯಾರಿಗೂ ಅನ್ಯಾಯವಾಗದಂತೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಸಿಎಂ ತಿಳಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.